ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‍ಸಿ)ದಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಕಾಕ್ರೋಚ್ ಜನತಾ ಪಾರ್ಟಿ ಏಕೆ ಮೌನವಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಪ್ರಶ್ನಿಸಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆಯಿತು ಎಂದು ದಿಲ್ಲಿಯಲ್ಲಿ ಇನ್ನಿಲ್ಲದ ಗಲಾಟೆ ಎಬ್ಬಿಸಿದ ಕಾಕ್ರೋಚ್ ಜನತಾ ಪಾರ್ಟಿ ಮತ್ತು ಜೆನ್ ಝೀಗಳು ಈಗೆಲ್ಲಿ ಹೋಗಿದ್ದಾರೆ? ಅವರಿಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಏಕೆ ಪ್ರಶ್ನಿಸುತ್ತಿಲ್ಲ ಎಂದು ಕೇಳಿದರು.

ರಾಜ್ಯದಲ್ಲಿ ಅತ್ಯಂತ ಭ್ರಷ್ಟ ಸರಕಾರ ಆಡಳಿತ ನಡೆಸುತ್ತಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕಕ್ಕೆ ದೊಡ್ಡ ಮಟ್ಟದ ಕೆಟ್ಟ ಹೆಸರು ಬರುತ್ತಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ಮಾಡಿ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ. ಆದರೆ ಅವರದೇ ಸರಕಾರ ಎಸುಗುತ್ತಿರುವ ಅಕ್ರಮಗಳ ಬಗ್ಗೆ ಅವರು ಮೌನ ವಹಿಸಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದರು.

ಒಂದು ಕಡೆ ಖಜಾನೆಯನ್ನು ಖಾಲಿ ಮಾಡಿಕೊಂಡು ಇನ್ನೊಂದು ಕಡೆ ಜನರಿಗೆ ಮಂಕು ಬೂದಿ ಎರಚಲು ಯೋಜನೆಗಳ ಮೇಲೆ ಯೋಜನೆಗಳನ್ನು ಘೋಷಣೆ ಮಾಡುವ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಹೀಗಿದ್ದರೂ ಕೆಪಿಎಸ್ಸಿಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಕಡಿವಾಣ ಹಾಕಲು ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ಕೈಚಲಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor