ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ದಿಢೀರನೆ ಹವಾಮಾನ ವೈಪರೀತ್ಯದಿಂದ ಸುರಿದ ಭಾರಿ ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಸಂಜೆ ಕಚೇರಿಯ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದವರು ಸಂಕಷ್ಟ ಎದುರಿಸುವಂತಹ ಸನ್ನಿವೇಶ ನಿರ್ಮಾಣವಾಯಿತು.

ಬೆಂಗಳೂರಿನ ನಗರದ ಹೃದಯ ಭಾಗ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಜೋರಾಗಿತ್ತು. ಉತ್ತರ ಬೆಂಗಳೂರಿನ ಹೆಬ್ಬಾಳ, ಆರ್.ಟಿ.ನಗರ, ಸಂಜಯನಗರ ಸಹಿತ, ಹೊಸ ಬಿಇಎಂಎಲ್ ಬಡಾವಣೆ ರಸ್ತೆ ಸಹಿತ ಹಲವು ಕಡೆಗಳಲ್ಲಿ ಮಳೆ ಪ್ರಮಾಣ ಜೋರಾಗಿತ್ತು.

ಅಲ್ಲದೆ, ವಿಶೇಷವಾಗಿ ಯಶವಂತಪುರ ಸರ್ಕಲ್, ವಿಜಯನಗರ, ರಾಜಾಜಿನಗರ, ಬಸವೇಶ್ವರನಗರ, ಶಾಂತಿನಗರ, ವಿಲ್ಸನ್ ಗಾರ್ಡನ್, ಲಕ್ಕಸಂದ್ರ, ಎಂ.ಜಿ.ರಸ್ತೆ, ಕಾರ್ಪೊ ರೇಷನ್ ಸರ್ಕಲ್, ಮೈಸೂರು ಬ್ಯಾಂಕ್ ಸರ್ಕಲ್ ಹಾಗೂ ಮೆಜೆಸ್ಟಿಕ್ ಸುತ್ತಮುತ್ತಲಿನ ಭಾಗಗಳಲ್ಲಿ ದಟ್ಟ ಮೋಡ ಕವಿದು ಧಾರಾಕಾರವಾಗಿ ಮಳೆ ಸುರಿಯಿತು. ಮಳೆಯ ತೀವ್ರತೆಗೆ ರಸ್ತೆಗಳ ಮೇಲೆ ನೀರು ನಿಂತು ವಾಹನಗಳ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡು ಸವಾರರು ಹರಸಾಹಸ ಪಡಬೇಕಾಯಿತು.

ಕೆ.ಆರ್.ಸರ್ಕಲ್‍ನಿಂದ ವಿಧಾನಸೌಧ ಹಾಗೂ ಎಂ.ಎಸ್. ಬಿಲ್ಡಿಂಗ್ ಕಡೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು ಸಂಪೂರ್ಣವಾಗಿ ಜಲಾವೃತಗೊಂಡಿತ್ತು. ಅನೇಕ ಕಡೆಗಳಲ್ಲಿ ಸಂಚಾರ ದಟ್ಟಣೆಯಿಂದಾಗಿ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲಾಗಿ ನಿಂತಿದ್ದ ದೃಶ್ಯ ಕಂಡುಬಂತು. ಗೊಟ್ಟಿಗೆರೆ, ರೂಪೇನ ಅಗ್ರಹಾರ, ನಾಗಸಂದ್ರ ಸಹಿತ ಹಲವು ಭಾಗದಲ್ಲಿ ಮಳೆ ಸುರಿಯಿತು. ಕೆಲವು ಭಾಗಗಳಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ವಿದ್ಯುತ್ ಕಡಿತವೂ ಉಂಟಾಗಿತ್ತು.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಸೆ.17ರ ಬೆಳಗಿನ ವರೆಗಿನ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor