ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ; ವೈದ್ಯಕೀಯ ಶಿಕ್ಷಣ ಇಲಾಖೆ, ಕೆಇಎಗೆ ಹೈಕೋರ್ಟ್ ನೋಟಿಸ್
ಬೆಂಗಳೂರು : ಮೂಡಬಿದರೆಯ ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನಲ್ಲಿ ಬಿಎಂಎಚ್ಎಸ್ ಕೋರ್ಸ್ ಮುಗಿಸಿ ಹೋಮಿಯೋಪಥಿ ಸ್ನಾತಕೋತ್ತರ ಕೋರ್ಸ್ ಪ್ರವೇಶ ಪಡೆಯಲು ಬಯಸಿದ 30 ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್‌ಗೆ ಹಾಜರಾಗಲು 'ವೈದ್ಯಕೀಯ ಅರ್ಹತಾ ಮಾನ್ಯತಾ ಪಟ್ಟಿ' (ಎಂಕ್ಯೂಆರ್‌ಎಲ್) ಹಾಗೂ ನೋಂದಣಿ ಪ್ರಮಾಣಪತ್ರ ಒದಗಿಸುವಂತೆ ಏಕಸದಸ್ಯ ನ್ಯಾಯಪೀಠ ನೀಡಿದ್ದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆಯಾಗಿದೆ.
ಏಕಸದಸ್ಯ ನ್ಯಾಯಪೀಠ 2025ರ ಅಕ್ಟೋಬರ್ 27ರಂದು ನೀಡಿದ್ದ ಆದೇಶ ಪ್ರಶ್ನಿಸಿ ರಾಷ್ಟ್ರೀಯ ಹೋಮಿಯೋಪಥಿ ಪರಿಷತ್ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ, ಆಳ್ವಾಸ್ ಹೋಮಿಯೋಪಥಿಕ್ ಕಾಲೇಜಿನ ಪ್ರಾಂಶುಪಾಲರು ಹಾಗೂ 30 ವಿದ್ಯಾರ್ಥಿಗಳು ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಿತು.