×
Ad

ಚುನಾವಣಾ ಪ್ರಚಾರದ ವೇಳೆ ಸುಳ್ಳು ಹೇಳಿಕೆ ನೀಡಿದ ಆರೋಪ; ಎಚ್‌ಡಿಕೆ ವಿರುದ್ಧದ ಸಮನ್ಸ್‌ಗೆ ಹೈಕೋರ್ಟ್ ತಡೆ

Update: 2025-12-04 23:50 IST

ಬೆಂಗಳೂರು : ಕಳೆದ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಸುಳ್ಳು ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ವಿಚಾರಣಾ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್‌ಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ವಿಚಾರಣಾ ನ್ಯಾಯಾಲಯ ಸಮನ್ಸ್‌ ಜಾರಿಗೊಳಿಸಿರುವುದನ್ನು ಪ್ರಶ್ನಿಸಿ ಎಚ್.ಡಿ. ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿತು.

ನಗರದ 42ನೇ ಎಸಿಜೆಎಂ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆ ಮತ್ತು ಆ ಸಂಬಂಧದ ಎಲ್ಲ ಪ್ರಕ್ರಿಯೆಗಳಿಗೆ ಮಧ್ಯಂತರ ತಡೆ ನೀಡಿ, ವಿಚಾರಣೆಯನ್ನು ಜನವರಿ ತಿಂಗಳ ಮೂರನೇ ವಾರಕ್ಕೆ ಮುಂದೂಡಿದ ನ್ಯಾಯಾಲಯ, ಪ್ರತಿವಾದಿಗಳಾದ ರಾಜ್ಯ ಸರ್ಕಾರ ಮತ್ತು ಫ್ಲೈಯಿಂಗ್‌ ಸ್ಕ್ವಾಡ್‌ ಅಧಿಕಾರಿಗೆ ನೋಟಿಸ್‌ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತು.

ಇದಕ್ಕೂ ಮುನ್ನ ಕುಮಾರಸ್ವಾಮಿ ಪರ ವಕೀಲ ಎ.ವಿ.ನಿಶಾಂತ್‌ ವಾದ ಮಂಡಿಸಿ, ಅರ್ಜಿದಾರರು ಚುನಾವಣಾ ಪ್ರಚಾರದ ವೇಳೆ ತಮ್ಮ‌ ಹೇಳಿಕೆಯಲ್ಲಿ ಪ್ರತಿಸ್ಪರ್ಧಿಯ ಹೆಸರನ್ನು ಎಲ್ಲಿಯೂ ಉಲ್ಲೇಖಿಸಿಲ್ಲ. ಆದರೂ, ಪೊಲೀಸರು ಸಲ್ಲಿಸಿದ್ದ ಬಿ ವರದಿಯನ್ನು ತಿರಸ್ಕರಿಸಿರುವ ವಿಚಾರಣಾ ನ್ಯಾಯಾಲಯ ಸಮನ್ಸ್‌ ಜಾರಿಗೊಳಿಸಿದೆ. ಆದ್ದರಿಂದ, ಸಮನ್ಸ್‌ಗೆ ತಡೆ ನೀಡಬೇಕು ಎಂದು ಕೋರಿದರು.

ಪ್ರಕರಣದ ಹಿನ್ನೆಲೆ:

2024ರ ಏಪ್ರಿಲ್ 14ರಂದು ಬಿಜೆಪಿ ಅಭ್ಯರ್ಥಿ ಸೋಮಣ್ಣ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ, ಸೋಮಣ್ಣ ಅವರ ಎದುರಾಳಿಯು ಗ್ಯಾಂಗ್‌ಸ್ಟರ್‌ ಕೊತ್ವಾಲ್‌ ರಾಮಚಂದ್ರನ ಅನುಯಾಯಿಯಾಗಿದ್ದರು. ಅಂಥವರಿಂದ ರಾಜ್ಯ ಹಾಗೂ ರಾಷ್ಟ್ರದ ಹಿತಾಸಕ್ತಿಯನ್ನು ರಕ್ಷಿಸಲು ಹೇಗೆ ಸಾಧ್ಯ ಎಂದು ಹೇಳಿಕೆ ನೀಡಿದ್ದರು. ಮರು ದಿನ ಆ ವಿಚಾರ ಪತ್ರಿಕೆಗಳಲ್ಲಿ ಪ್ರಕಟವಾಗಿತ್ತು.

ಆದರೆ, 2024ರ ಮಾರ್ಚ್ 16ರಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದ್ದರಿಂದ, ಚುನಾವಣಾಧಿಕಾರಿಯು ಕುಮಾರಸ್ವಾಮಿ ವಿರುದ್ಧ ಚುನಾವಣಾ ಪ್ರಚಾರ ವೇಳೆ ಸುಳ್ಳು ಹೇಳಿಕೆ ನೀಡಿದ್ದಾರೆಂದು ಐಪಿಸಿ ಸೆಕ್ಷನ್‌ 171ಜಿ, 123(4) ಅಡಿ ಪ್ರಕರಣ ದಾಖಲಿಸಿದ್ದರು. ಅದನ್ನು ಆಧರಿಸಿ 42ನೇ ಎಸಿಜೆಎಂ ನ್ಯಾಯಾಲಯ ತನಿಖೆಗೆ ಆದೇಶ ನೀಡಿತ್ತು. ತನಿಖೆ ನಡೆಸಿದ ಪೊಲೀಸರು ಬಿ ರಿಪೋರ್ಟ್‌ ಸಲ್ಲಿಸಿದ್ದರು. ಆದರೆ, ಬಿ ರಿಪೋರ್ಟ್‌ ತಿರಸ್ಕರಿಸಿದ್ದ ನ್ಯಾಯಾಲಯ, ಡಿಸೆಂಬರ್‌ 6ರಂದು ಖುದ್ದು ಹಾಜರಾಗುವಂತೆ ಕುಮಾರಸ್ವಾಮಿ ಅವರಿಗೆ ಸಮನ್ಸ್‌ ಜಾರಿಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕುಮಾರಸ್ವಾಮಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News