ಬೀದಿ ಬದಿ ವ್ಯಾಪಾರಿಗಳಿಂದಾಗಿರುವ ಒತ್ತುವರಿ ತೆರವಿಗೆ ಕೋರಿದ ಪಿಐಎಲ್; ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ನಗರದ ಟಿ. ದಾಸರಹಳ್ಳಿಯಿಂದ ಜಾಲಹಳ್ಳಿ ಕ್ರಾಸ್‌ವರೆಗೆ ತುಮಕೂರು-ಬೆಂಗಳೂರು ಸರ್ವಿಸ್ ರಸ್ತೆಯ ಎರಡು ಬದಿಗಳಲ್ಲಿ ಬೀದಿ ವ್ಯಾಪಾರಿಗಳು ಮಾಡಿಕೊಂಡಿರುವ ಒತ್ತುವರಿಗಳನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಟಿ. ದಾಸರಹಳ್ಳಿ ಎನ್‌ಎಚ್-4 ನಾಗರಿಕರು ಹಾಗೂ ನಿವಾಸಿಗಳ ಕ್ಷೇಮಾಭಿವೃದ್ದಿ ಸಂಘದ ಉಪಾಧ್ಯಕ್ಷ ಎ. ಆನಂದ್ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಕೆಲ ಅರ್ಜಿ ಆಲಿಸಿದ ನ್ಯಾಯಪೀಠ ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ದಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಬಿಎಂಆರ್‌ಸಿಎಲ್ ಮುಖ್ಯಸ್ಥರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ನವೆಂಬರ್ 2ಕ್ಕೆ ಮುಂದೂಡಿತು.
ಅರ್ಜಿದಾರರ ಮನವಿ:
ತುಮಕೂರು-ಬೆಂಗಳೂರು ಸರ್ವಿಸ್ ರಸ್ತೆಯಲ್ಲಿ ಟಿ. ದಾಸರಹಳ್ಳಿಯಿಂದ ಜಾಲಹಳ್ಳಿ ಕ್ರಾಸ್‌ವರೆಗೆ ಮೆಟ್ರೋ ನಿಲ್ದಾಣದಿಂದ ರಾಕ್ ಲೈನ್ ಮಾಲ್ ತನಕ ಕಚೇರಿಗಳು, ಶಾಲೆಗಳು, ಆಸ್ಪತ್ರೆಗಳು, ಗಾರ್ಮೆಂಟ್ಸ್ ಕಂಪನಿಗಳಿವೆ. ಅಲ್ಲದೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಖಾಸಗಿ ಬಸ್ ನಿಲ್ದಾಣಗಳೂ ಇವೆ. ಇದರಿಂದಾಗಿ, ಈ ರಸ್ತೆಯಲ್ಲಿ ಸಂಚಾರ ಮತ್ತು ಜನಸಂದಣಿ ಹೆಚ್ಚಾಗಿರುತ್ತದೆ. ರಸ್ತೆಯ ಎರಡೂ ಬದಿಗಳಲ್ಲಿ ಬೀದಿ ವ್ಯಾಪಾರಿಗಳು ಒತ್ತುವರಿ ಮಾಡಿಕೊಂಡು ಶೆಡ್‌ಗಳನ್ನು ನಿರ್ಮಿಸಿಕೊಂಡು ಹೂವು, ಹಣ್ಣು, ತರಕಾರಿ ಹಾಗೂ ಇತರ ವಸ್ತುಗಳ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಆದ್ದರಿಂದ, ಒತ್ತುವರಿ ತೆರವುಗೊಳಿಸುವ ಸಂಬಂಧ ನೀಡಿರುವ ಮನವಿಯನ್ನು ಪರಿಗಣಿಸುವಂತೆ ಸರ್ಕಾರ ಮತ್ತು ಪಾಲಿಕೆಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.