ಆಯುಷ್ ವೈದ್ಯಾಧಿಕಾರಿಗಳನ್ನು ಸೇವೆಯಿಂದ ಬಿಡುಗಡೆಗೊಳಿಸುವುದು ಬೇಡ; ಸರಕಾರಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ

Update: 2026-08-13 23:12 IST

ಬೆಂಗಳೂರು: ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್ ಯೋಜನೆಯಡಿ ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ 2007-2008ರಿಂದ ಸೇವೆ ಸಲ್ಲಿಸುತ್ತಿರುವ ಆಯುಷ್ ವೈದ್ಯಾಧಿಕಾರಿಗಳನ್ನು ಸದ್ಯ ಸೇವೆಯಿಂದ ಬಿಡುಗಡೆಗೊಳಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಸೇವೆ ಖಾಯಂಗೊಳಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು 2026ರ ಜುಲೈ 23ರಂದು ಹೊರಡಿಸಿದ ಆದೇಶ ಪ್ರಶ್ನಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕು ಆಸ್ಪತ್ರೆಯಲ್ಲಿ ಆಯುಷ್ ವೈದ್ಯಾಧಿಕಾರಿಯಾಗಿರುವ ಡಾ. ಶಿವಲಿಂಗಪ್ಪ ಸೇರಿ ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆಯುಷ್ ವೈದ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವ 12 ವೈದ್ಯರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ನ್ಯಾಯಾಲಯದ ಮುಂದಿನ ಅದೇಶದ ವರೆಗೆ ಅರ್ಜಿದಾರ ಆಯುಷ್ ವೈದ್ಯಾಧಿಕಾರಿಗಳು ಈಗ ಸೇವೆ ಸಲ್ಲಿಸುತ್ತಿರುವ ಸ್ಥಳಗಳಿಂದ ಬಿಡುಗಡೆಗೊಳಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಜತೆಗೆ, ಅರ್ಜಿಯಲ್ಲಿ ಪ್ರತಿವಾದಿಗಳಾದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ರಾಜ್ಯ ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆ ಮುಂದೂಡಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News