ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ನಡೆಸಲು ಸಹಕಾರ ಚುನಾವಣಾ ಪ್ರಾಧಿಕಾರವು ಚುನಾವಣಾ ಅಧಿಕಾರಿಯನ್ನು ನೇಮಿಸಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಬ್ಯಾಂಕ್‌ನ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ನಿರ್ದೇಶನ ಕೋರಿ ಬ್ಯಾಂಕ್‌ನ ನಿರ್ದೇಶಕರೂ ಆಗಿರುವ ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಸರ್ಕಾರದ ಪರ ವಕೀಲರು ಹಾಜರಾಗಿ, ಬ್ಯಾಂಕ್‌ನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ನಡೆಸಲು ಸಹಕಾರ ಚುನಾವಣಾ ಪ್ರಾಧಿಕಾರವು ಚುನಾವಣಾಧಿಕಾರಿಯನ್ನು ನೇಮಿಸಿದೆ ಎಂದರು.

ಚುನಾವಣಾ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿಗೆ ಸಂಬಂಧಿಸಿದಂತೆ ವಾದ ಮಂಡಿಸಲು ಕಾಲಾವಕಾಶ ನೀಡಬೇಕೆಂದು ಅಪೆಕ್ಸ್ ಬ್ಯಾಂಕ್ ಪರ ವಕೀಲರು ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆಪ್ಟೆಂಬರ್ 8ಕ್ಕೆ ಮುಂದೂಡಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor