ಬೆಂಗಳೂರು : ಪೊಲೀಸ್ ಹಾಗೂ ಭದ್ರತಾ ಪಡೆಗಳಲ್ಲಿ ಸೇವೆ ಸಲ್ಲಿಸುವವರಿಗೂ ಕುಟುಂಬ, ಸಂಬಂಧಗಳು, ವೈಯಕ್ತಿಕ ಸಮಸ್ಯೆಗಳು, ಒತ್ತಡ, ದುಃಖ ಇತ್ಯಾದಿ ತೊಂದರೆಗಳಿರುತ್ತವೆ. ಇತರರ ಜೀವ ರಕ್ಷಣೆ ಮತ್ತು ಸುರಕ್ಷತೆಯ ಜವಾಬ್ದಾರಿ ಹೊತ್ತಿರುವ ಇವರ ಮಾನಸಿಕ ಆರೋಗ್ಯ ಹಾಗೂ ಯೋಗಕ್ಷೇಮದ ಬಗ್ಗೆ ಆಡಳಿತ ವ್ಯವಸ್ಥೆ ಗಮನಹರಿಸಬೇಕು ಎಂದು ಹೈಕೋರ್ಟ್ ಸಾರಿದೆ.

ವೈಯಕ್ತಿಕ ಕಾರಣಗಳಿಗೆ ತೀವ್ರ ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಯತ್ನಿಸಿದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಬ್ ಇನ್‌ಸ್ಪೆಕ್ಟರ್ ಒಬ್ಬರ ಪ್ರಕರಣದಲ್ಲಿ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಹತ್ವದ ಆದೇಶ ನೀಡಿದೆ.

ಪೊಲೀಸ್ ಮತ್ತು ಇತರ ಭದ್ರತಾ ಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಯೂ ಮನುಷ್ಯರೇ. ಅವರ ಮಾನಸಿಕ ಆರೋಗ್ಯ ಮತ್ತು ಒಟ್ಟಾರೆ ಯೋಗಕ್ಷೇಮದ ಬಗ್ಗೆ ಗಮನಹರಿಸುವುದು ಅಗತ್ಯ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಸ್ತಿತ್ವದಲ್ಲಿರುವ ನೀತಿಗಳನ್ನು ಪರಿಶೀಲಿಸಲು ಮತ್ತು ಸಶಸ್ತ್ರ ಪಡೆಗಳು, ಪೊಲೀಸ್ ಮತ್ತು ಇತರ ಭದ್ರತಾ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುವ ಸಿಬ್ಬಂದಿಯ ಮಾನಸಿಕ ಆರೋಗ್ಯ ಮತ್ತು ಕಲ್ಯಾಣ ಕ್ರಮಗಳನ್ನು ಬಲಪಡಿಸಲು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಹೈಕೋರ್ಟ್ ಆದೇಶಿಸಿದೆ.

ಜತೆಗೆ, ಈ ಪ್ರಕರಣದಲ್ಲಿ ಸಬ್ ಇನ್‌ಸ್ಪೆಕ್ಟರ್ ಅವರಿಗೆ ಕರ್ತವ್ಯದ ಭಾಗವಾಗಿ ನೀಡಲಾಗಿರುವ ಬಂದೂಕಿನಿಂದ ಆತ್ಮಹತ್ಯೆಗೆ ಯತ್ನಸಿರುವುದರಿಂದ ಬಂದೂಕುಗಳ ಸುರಕ್ಷಿತ ಮತ್ತು ಜವಾಬ್ದಾರಿಯುತ ಬಳಕೆಯನ್ನು ಸಂಬಂಧಪಟ್ಟ ಇಲಾಖೆಗಳು, ಸಕ್ಷಮ ಪ್ರಾಧಿಕಾರಿಗಳು ಖಾತರಿಪಡಿಸಿಕೊಳ್ಳಬೇಕು ಎಂದೂ ನಿರ್ದೇಶಿಸಿರುವ ನ್ಯಾಯಪೀಠ, ಈ ಆದೇಶವನ್ನು ಸಿಐಎಸ್ಎಫ್ ಮಹಾನಿರ್ದೇಶಕರು, ಕರ್ನಾಟಕ ಪೊಲೀಸ್ ಮಹಾನಿರ್ದೇಶಕರು ಹಾಗೂ ಬಂದೂಕುಗಳನ್ನು ವಹಿಸಿಕೊಂಡಿರುವ ಸಿಬ್ಬಂದಿಯನ್ನು ಹೊಂದಿರುವ ಇತರ ರಾಜ್ಯ ಸಂಸ್ಥೆಗಳ ಮುಖ್ಯಸ್ಥರಿಗೆ ಮಾಹಿತಿ ಮತ್ತು ಪರಿಗಣನೆಗಾಗಿ ಕಳುಹಿಸಬೇಕು ಎಂದು ಹೈಕೋರ್ಟ್ ರಿಜಿಸ್ಟ್ರೀಗೆ ಸೂಚನೆ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor