ವಿಜಯಲಕ್ಷ್ಮೀ ದರ್ಶನ್ಗೆ ನಿಂದಿಸಿದ ಆರೋಪ; ನಟ ಧನ್ವೀರ್ ವಿರುದ್ಧದ ಪ್ರಕರಣಗಳಿಗೆ ಹೈಕೋರ್ಟ್ ಮಧ್ಯಂತರ ತಡೆ
ಧನ್ವೀರ್ | PC : instagram
ಬೆಂಗಳೂರು : ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರನ್ನು ನಿಂದಿಸಿದ ಆರೋಪದಲ್ಲಿ ನಟ ಧನ್ವೀರ್ ವಿರುದ್ಧ ದಾಖಲಾಗಿರುವ ಮೂರು ಪ್ರತ್ಯೇಕ ಪ್ರಕರಣಗಳಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಚಾಮರಾಜಪೇಟೆ, ರಾಜರಾಜೇಶ್ವರಿ ನಗರ, ಬಸವೇಶ್ವರ ನಗರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರತ್ಯೇಕ ಮೂರು ಎಫ್ಐಆರ್ ಹಾಗೂ ಅದಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ನಟ ಧನ್ವೀರ್ ಗೌಡ ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಧನ್ವೀರ್ ಪರ ವಕೀಲರು ವಾದ ಮಂಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆದರೆ, ನಿರ್ದಿಷ್ಟವಾಗಿ ಯಾವ ಮಹಿಳೆಗೆ ನಿಂದನೆ ಮಾಡಲಾಗಿದೆ ಎಂಬುದನ್ನು ಎಲ್ಲಿಯೂ ಉಲ್ಲೇಖಿಸಿಲ್ಲ. ಕೇವಲ ಅವಾಚ್ಯ ಶಬ್ದಗಳ ಬಳಕೆಯಿಂದ ಸಾರ್ವಜನಿಕ ಶಾಂತಿಗೆ ಯಾವುದೇ ಧಕ್ಕೆಯಾಗುವುದಿಲ್ಲ. ಆದ್ದರಿಂದ, ಪ್ರಕರಣದ ತನಿಖೆಗೆ ತಡೆ ನೀಡಬೇಕು ಎಂದು ಕೋರಿದರು. ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರದ ಪರ ವಕೀಲರ ತನಿಖೆಗೆ ತಡೆಯಾಜ್ಞೆ ನೀಡದಂತೆ ಮನವಿ ಮಾಡಿದರು.
ರಾಜಾಜಿನಗರ ಹಾಗೂ ಬಸವೇಶ್ವರನಗರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎಫ್ಐಆರ್ ಹಾಗೂ ಅದಕ್ಕೆ ಸಂಬಂಧಿಸಿದ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿತಲ್ಲದೆ, ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಈ ಹಿಂದೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಸಹ ನ್ಯಾಯಾಲಯ ಮುಂದುವರಿಸಿದೆ. ಇದೇ ವೇಳೆ, ಅರ್ಜಿದಾರರ ವಿರುದ್ಧ ಆರೋಪಿಸಿರುವಂತೆ ನಿಂದನೆ ಮತ್ತು ಜೀವ ಬೆದರಿಕೆಯೊಡ್ಡಲಾಗಿದೆ ಎನ್ನಲಾದ ಆಡಿಯೋನ ಸಂಪೂರ್ಣ ವಿವರಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸರ್ಕಾರದ ಪರ ವಕೀಲರಿಗೆ ಸೂಚಿಸಿ ವಿಚಾರಣೆ ಮುಂದೂಡಿತು.
ಪ್ರಕರಣವೇನು?
ವಸತಿ ಸಚಿವ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಹಗುರವಾಗಿ ಮಾತನಾಡಿದ ಆರೋಪದಡಿ ಚಾಮರಾಜಪೇಟೆ ಠಾಣೆಯಲ್ಲಿ ಧನ್ವೀರ್ ಝೈದ್ ಖಾನ್ ಅಭಿಮಾನಿಗಳ ಸಂಘದ ಅಧ್ಯಕ್ಷ ವಿನಾಯಕ್ ಎಂಬುವರು ದೂರು ನೀಡಿದ್ದರು. ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಆರೋಪದಡಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಪಿ.ಎ. ನಾಗರಾಜು ಆರ್.ಆರ್. ನಗರ ಪೊಲೀಸ್ ಠಾಣೆಯಲ್ಲಿ ಹಾಗೂ ಭೋಜರಾಜ ರೈ ಎಂಬುವರು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.