ಬೆಂಗಳೂರು : ಯಶವಂತಪುರ ಎಪಿಎಂಸಿಯಲ್ಲಿ ಬಾಲಕಾರ್ಮಿಕರನ್ನು ಕೆಲಸಕ್ಕೆ ಬಳಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ಬಾಲಕಾರ್ಮಿಕ ಪದ್ಧತಿಯನ್ನು ತಕ್ಷಣದಿಂದಲೇ ನಿಲ್ಲಿಸಿ ತಪ್ಪಿತಸ್ಥರನ್ನು ಬಂಧಿಸಿ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮಂಗಳವಾರ ಯಶವಂತಪುರ ಎಪಿಎಂಸಿಗೆ ದಿಢೀರ್ ಭೇಟಿ ನೀಡಿ ರೈತರು, ಕೂಲಿ ಕಾರ್ಮಿಕರು ಹಾಗೂ ವ್ಯಾಪಾರಿಗಳೊಂದಿಗೆ ಚರ್ಚಿಸಿದ ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಸಣ್ಣ ಮಕ್ಕಳಿಂದ ಯಾವುದೇ ರೀತಿಯ ಕೆಲಸ ಮಾಡಿಸುವುದನ್ನು ತಕ್ಷಣ ನಿಲ್ಲಿಸಬೇಕು. ರಾಜ್ಯದ ಇತರೆ ಎಪಿಎಂಸಿಗಳಿಗೂ ಸಚಿವರು ಭೇಟಿ ನೀಡಿ ಅಲ್ಲಿನ ಸಮಸ್ಯೆಗಳು ಹಾಗೂ ದೂರುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದು ಹೇಳಿದರು.

ಯಶವಂತಪುರ ಎಪಿಎಂಸಿ ರೈತರು ಮತ್ತು ವ್ಯಾಪಾರಿಗಳ ನಡುವಿನ ಪ್ರಮುಖ ಕೊಂಡಿಯಾಗಿದ್ದು, ದೇಶದ ವಿವಿಧ ಭಾಗಗಳಿಂದ ಕೃಷಿ ಉತ್ಪನ್ನಗಳು ಇಲ್ಲಿ ಬರುತ್ತವೆ. ಇಲ್ಲಿನ ಕೃಷಿ ಉತ್ಪನ್ನಗಳ ಗುಣಮಟ್ಟ ಮತ್ತು ರುಚಿಗೆ ಬೇರೆ ರಾಜ್ಯಗಳ ಉತ್ಪನ್ನಗಳಿಗಿಂತ ವಿಶೇಷತೆ ಇದೆ ಎಂದು ಹೇಳಿದರು.

ರೈತರು ದಲ್ಲಾಳಿಗಳು ಮತ್ತು ವರ್ತಕರು ಪಡೆಯುತ್ತಿರುವ ಕಮಿಷನ್ ಕುರಿತು ದೂರು ನೀಡಿದ್ದಾರೆ. ಈ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಾಜ್ಯದ ಮುಖ್ಯಸ್ಥನಾಗಿ ರೈತರ ಸಮಸ್ಯೆ ಮತ್ತು ಕಷ್ಟಗಳನ್ನು ಅರಿಯುವುದು ನನ್ನ ಕರ್ತವ್ಯ. ಎಪಿಎಂಸಿಯಲ್ಲಿ ರೈತರು, ಮಹಿಳಾ ಕೂಲಿ ಕಾರ್ಮಿಕರು, ಮಧ್ಯವರ್ತಿಗಳು ಹಾಗೂ ವ್ಯಾಪಾರಿಗಳೊಂದಿಗೆ ನೇರವಾಗಿ ಮಾತನಾಡಿ ಅವರ ಸಮಸ್ಯೆಗಳನ್ನು ತಿಳಿದುಕೊಂಡಿದ್ದೇನೆ ಎಂದರು.

ಎಪಿಎಂಸಿ ವ್ಯವಸ್ಥೆ ಸಂಪೂರ್ಣವಾಗಿ ನಂಬಿಕೆಯ ಆಧಾರದ ಮೇಲೆ ನಡೆಯುತ್ತಿದ್ದು, ಉತ್ತರ ಭಾರತದಿಂದಲೂ ಕೃಷಿ ಉತ್ಪನ್ನಗಳು ಇದೇ ನಂಬಿಕೆಯ ಮೇಲೆ ಬರುತ್ತವೆ. ಆರ್‌ಟಿಜಿಎಸ್ ಮೂಲಕ ಹಣ ಪಾವತಿ ನಡೆಯುತ್ತಿದೆ ಎಂದು ಹೇಳಿದರು.

ರಾಜ್ಯದ ಎಲ್ಲ ಎಪಿಎಂಸಿ ಮಾರುಕಟ್ಟೆಗಳಿಗೆ ಸಚಿವರು ಭೇಟಿ ನೀಡಿ ರೈತರು ಮತ್ತು ವ್ಯಾಪಾರಿಗಳಿಗೆ ನ್ಯಾಯ ದೊರಕುವಂತೆ ಕ್ರಮ ಕೈಗೊಳ್ಳಬೇಕು. ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಸೂಕ್ತ ರೂಪುರೇಷೆ ಸಿದ್ಧಪಡಿಸಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಎಪಿಎಂಸಿ ಮಾರುಕಟ್ಟೆಗಳ ಪಾರ್ಕಿಂಗ್ ವ್ಯವಸ್ಥೆ ಕುರಿತು ಮಾತನಾಡಿದ ಅವರು, ಪಾರ್ಕಿಂಗ್ ನಿರ್ವಹಣೆಗೆ ಕರೆಯಲಾಗಿದ್ದ ಟೆಂಡರ್‌ಗೆ ಯಾರೂ ಅರ್ಜಿ ಸಲ್ಲಿಸಿಲ್ಲ ಎಂಬ ಮಾಹಿತಿ ದೊರೆತಿದ್ದು, ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor