×
Ad

ಎಲ್ಲಾ ವಾಹನಗಳಿಗೆ ಸಿಎಂವಿ ಕಾಯ್ದೆಯ ಮಾನದಂಡದಂತೆ ಹೆಡ್ ಲೈಟ್ ಅಳವಡಿಕೆ ಕಡ್ಡಾಯ: ಎಡಿಜಿಪಿ ಅಲೋಕ್ ಕುಮಾರ್ ಆದೇಶ

Update: 2024-06-20 12:47 IST

Photo credit: X@KarnatakaVarthe

ಬೆಂಗಳೂರು, ಜೂ.20: ಎಲ್ಲಾ ವಾಹನಗಳು ಕೇಂದ್ರ ಮೋಟರ್ ವಾಹನ ಕಾಯ್ದೆ(Central Motor Act)ಯಲ್ಲಿ ನಮೂದಿಸಿರುವ ಮಾನದಂಡದನ್ವಯ ನಿಗದಿತ ಹೆಡ್ ಲೈಟ್ ಗಳನ್ನು ಮಾತ್ರ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು ಬೆಳಕು ಹೊರ ಚೆಲ್ಲುವ ಎಲ್ ಇಡಿ ದೀಪಗಳನ್ನು ಅಳವಡಿಸುತ್ತಿರುವುದು ಕಂಡುಬರುತ್ತಿದೆ. ಇದರಿಂದ ಎದುರುಗಡೆಯಿಂದ ಆಗಮಿಸುವ ಇತರ ವಾಹನ ಸವಾರರಿಗೆ ತೀವ್ರ ತೊಂದರೆಯುಂಟಾಗುತ್ತಿದೆ. ಇದು ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿರುವುದಕ್ಕೂ ಕಾರಣವಾಗುತ್ತಿದೆ. ಅದರಲ್ಲೂ ಪ್ರಮುಖವಾಗಿ ಭಾರಿ ಗಾತ್ರದ ವಾಹನಗಳಾದ ಲಾರಿ, ಟ್ರಕ್, ಬಸ್ ಮುಂತಾದವುಗಳು ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ (dazzling and glaring) ಎಲ್ಇಡಿ ದೀಪಗಳನ್ನು ತಮ್ಮ ವಾಹನಗಳಲ್ಲಿ ಅಳವಡಿಸುತ್ತಿರುವುದರಿಂದ ಇತರ ವಾಹನ ಚಾಲಕರುಗಳಿಗೆ ವಾಹನ ಚಲಾಯಿಸಲು ತೀವ್ರ ತೊಂದರೆಯಾಗುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಎಲ್ಲ ವಾಹನಗಳಿಗೆ ಕಡ್ಡಾಯವಾಗಿ ಸಿಎಂವಿ ಮಾನದಂಡದನ್ವಯ ಒಂದೇ ಮಾದರಿಯ ಹೆಡ್ ಲೈಟ್ಗಳನ್ನು ಅಳವಡಿಸಿಕೊಳ್ಳಬೇಕು ಎಂದು ಅಲೋಕ್ ಕುಮಾರ್ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಒಂದು ವೇಳೆ ಸಿಎಂವಿ ಕಾಯ್ದೆಯಲ್ಲಿನ ನಿಯಮಗಳನ್ನು ಉಲ್ಲಂಘಿಸಿದರೆ, ಅಂತಹ ವಾಹನ ಸವಾರರ ವಿರುದ್ಧ ಕೇಸ್ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಸಿರುವ ಎಡಿಜಿಪಿ, ಈ ಕುರಿತಾಗಿ ಘಟಕಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಂಚರಿಸುವ ವಾಹನಗಳ ಮೇಲೆ ನಿಗಾ ವಹಿಸಬೇಕು. ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್ಇಡಿ ದೀಪಗಳನ್ನು ಅಳವಡಿಸಿರುವ ವಾಹನಗಳ ವಿರುದ್ಧ ಜುಲೈ ತಿಂಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News