ಪಶು ವೈದ್ಯಾಧಿಕಾರಿಗಳ ನೇಮಕಕ್ಕೆ ಕ್ರಮ: ಕೆ.ವೆಂಕಟೇಶ್
ಬೆಂಗಳೂರು : ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿಯಿರುವ 400 ಪಶು ವೈದ್ಯಾಧಿಕಾರಿಗಳನ್ನು ಶೀಘ್ರದಲ್ಲಿಯೇ ನೇಮಕ ಮಾಡಲಾಗುವುದು ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ.
ಸೋಮವಾರ ವಿಧಾನ ಸಭೆಯಲ್ಲಿ ಪ್ರಶ್ತೋತ್ತರ ವೇಳೆಯಲ್ಲಿ ಸದಸ್ಯ ಶರಣಗೌಡ ಕಂದಕೂರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕರ್ನಾಟಕ ಲೋಕ ಸೇವಾ ಆಯೋಗದ ಮೂಲಕ ಭರ್ತಿ ಮಾಡುವವರೆಗೂ ಗುತ್ತಿಗೆ ಆಧಾರದಲ್ಲಿ ಪಶುವೈದ್ಯಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲು ಕ್ರಮವಹಿಸಲಾಗಿದೆ. 360 ಪಶು ವೈದ್ಯಾಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗಿರುತ್ತಾರೆ. ಕಲ್ಯಾಣ ಕರ್ನಾಟಕ ಅನುಚ್ಛೇದ-371(ಜೆ)ರಡಿ 32 ಪಶುವೈದ್ಯಕೀಯ ಪರೀಕ್ಷಕರ ಹುದ್ದೆಗಳಿಗೆ ವಿಶೇಷ ನೇಮಕಾತಿಯಡಿ ನೇಮಕಾತಿ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ ಎಂದರು.
ಈಗಾಗಲೇ 27 ಅರ್ಹ ಅಭ್ಯರ್ಥಿಗಳಿಗೆ ಆದೇಶವನ್ನು ನೀಡಲಾಗಿದೆ. ಉಳಿದ 5 ಅಭ್ಯರ್ಥಿಗಳಿಗೆ ಸಿಂಧುತ್ವ ಪ್ರಮಾಣ ಪತ್ರಗಳ ವರದಿ ಬಂದ ನಂತರ ಆದೇಶ ಪತ್ರ ನೀಡಲಾಗವುದು. 700 ಡಿ ದರ್ಜೆ ನೌಕರರನ್ನು ಹೊರಗುತ್ತಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳುವ ಪ್ರಸ್ತಾವನೆಯು ಪರಿಶೀಲನೆಯಲ್ಲಿದ್ದು, ಯಾದಗಿರಿ ಜಿಲ್ಲೆಯಲ್ಲಿ 60 ಡಿ ದರ್ಜೆ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.