×
Ad

Karnataka Budget 2026 | ಮನೆ ನಿರ್ಮಾಣ ಸಹಾಯ ಧನ ಏರಿಕೆ, ರಿಯಾಯತಿ ದರದಲ್ಲಿ ನಿವೇಶನ ಹಂಚಿಕೆ

Update: 2026-03-06 23:44 IST

ಸಾಂದರ್ಭಿಕ ಚಿತ್ರ | PC : freepik

ಬೆಂಗಳೂರು : ಸರ್ವರಿಗೂ ಸೂರು ಕಲ್ಪಿಸುವ ಉದ್ದೇಶದಿಂದ ಫಲಾನುಭವಿಗಳಿಗೆ ನೀಡುವ ಸಹಾಯಧನ ಮೊತ್ತವನ್ನು ರಾಜ್ಯ ಸರಕಾರ ಈ ಬಜೆಟ್‍ನಲ್ಲಿ ಏರಿಕೆ ಮಾಡಿದೆ. ಜತೆಗೆ, ನಮ್ಮ ಮನೆ ಯೋಜನೆಯಲ್ಲಿ ಮುಂದಿನ ಎರಡು ವರ್ಷಗಳಲ್ಲಿ 50 ಸಾವಿರ ನಿವೇಶನಗಳನ್ನು ರಿಯಾಯತಿ ದರದಲ್ಲಿ ವಿತರಿಸುವುದಾಗಿ ಘೋಷಣೆ ಮಾಡಿದೆ.

ರಾಜ್ಯದ ವಿವಿಧ ವಸತಿ ಯೋಜನೆಗಳಡಿ ಬಿಎಲ್‍ಸಿ ಆಧಾರಿತ ಒಂದು ಲಕ್ಷ ಮನೆಗಳ ಹೊಸ ಗುರಿಯನ್ನು ಮಂಜೂರು ಮಾಡಲಾಗುವುದು. ಸದರಿ ಗುರಿಯಡಿ ಆಯ್ಕೆಯಾಗುವ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ನೀಡುವ ಸಹಾಯಧನವನ್ನು 1.20 ಲಕ್ಷ ರೂ. ಗಳಿಂದ 2 ಲಕ್ಷ ರೂ.ಗಳಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ 2 ಲಕ್ಷ ರೂ.ಗಳಿಂದ 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ವಿವಿಧ ವಸತಿ ಯೋಜನೆಗಳಡಿಯಲ್ಲಿ 7,328 ಕೋಟಿ ರೂ.ಗಳ ಮೊತ್ತದಲ್ಲಿ ಒಟ್ಟಾರೆ 4,19,454 ಮನೆಗಳ ನಿರ್ಮಾಣವನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ಹಿಂದಿನ ಸರಕಾರವು ಅನುದಾನ ನೀಡದೇ ಮಂಜೂರಾತಿ ನೀಡಿರುವ 4.90 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ನಮ್ಮ ಸರಕಾರದ ವತಿಯಿಂದ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಉಲ್ಲೇಖಿಸಿದ್ದಾರೆ.

ರಾಜ್ಯ ವಸತಿ ಯೋಜನೆಗಳಡಿ ಅರ್ಹ ಫಲಾನುಭವಿಗಳನ್ನು ಆನ್‍ಲೈನ್ ಲಾಟರಿ ಮೂಲಕ ಗ್ರಾಮ ಸಭೆಗಳಲ್ಲಿ ಆಯ್ಕೆಗೊಳಿಸಲಾಗುವುದು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ (ಎಎಚ್‍ಪಿ) 1.29 ಲಕ್ಷ ಮನೆಗಳ ನಿರ್ಮಾಣ ಕಾರ್ಯವನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಅನುಷ್ಠಾನಗೊಳಿಸುತ್ತಿದೆ. ರಾಜ್ಯ ಸರಕಾರದಿಂದ 1,136 ಕೋಟಿ ರೂ.ಗಳ ಅನುದಾನವನ್ನು ಹೆಚ್ಚುವರಿಯಾಗಿ ಫಲಾನುಭವಿಗಳ ವಂತಿಕೆಗೆ ಎದುರಾಗಿ ಒದಗಿಸಿ 2025-26ನೆ ಸಾಲಿಗೆ ಒಟ್ಟಾರೆ 79,134 ಮನೆಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಇದರಿಂದ ಕೊಳಗೇರಿ ನಿವಾಸಿಗಳಿಗೆ ಶಾಶ್ವತ ಸೂರು ಕಲ್ಪಿಸಿದಂತಾಗಿದೆ ಎಂದು ತಿಳಿಸಿದರು.

ಆನೇಕಲ್‍ನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ: ಕೆಎಚ್‍ಬಿ ಸೂರ್ಯ ಕ್ರೀಡಾ ಗ್ರಾಮ ಎಂಬ ಹೆಸರಿನಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ 80ಸಾವಿರ ಆಸನ ಸಾಮಥ್ರ್ಯವುಳ್ಳ ಕ್ರಿಕೆಟ್ ಕ್ರೀಡಾಂಗಣ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟಗಳನ್ನು ನಡೆಸಲು ಅನುಕೂಲವಾಗುವಂತೆ ಅಂತಾರಾಷ್ಟ್ರೀಯ ಕ್ರೀಡಾಂಗಣವನ್ನು ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಪ್ರಕಟಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News