×
Ad

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ ತೆರವು | ಅಗತ್ಯ ಷರತ್ತುಗಳನ್ನು ವಿಧಿಸಿ ಸರಕಾರ ಅನುಮತಿ ನೀಡಬಹುದು : ಹೈಕೋರ್ಟ್

Update: 2026-01-23 11:39 IST

ಬೆಂಗಳೂರು: ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳ ಕಾರ್ಯಾಚರಣೆ ನಿಷೇಧಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ರದ್ದುಪಡಿಸಿರುವ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಬೈಕ್‌ಗಳನ್ನು ಸಾರಿಗೆ ವಾಹನಗಳಾಗಿ (ಟ್ಯಾಕ್ಸಿ) ಬಳಸಲು ಅಗತ್ಯ ಷರತ್ತುಗಳನ್ನು ವಿಧಿಸಿ ಸರ್ಕಾರ ಅನುಮತಿ ನೀಡಬಹುದು ಎಂದು ಆದೇಶಿಸಿದೆ.

ರಾಜ್ಯ ಸರ್ಕಾರ ಮೋಟಾರು ವಾಹನ ಕಾಯ್ದೆಯಡಿ ಸೂಕ್ತ ಮಾರ್ಗಸೂಚಿ ಮತ್ತು ನಿಯಮಗಳನ್ನು ರೂಪಿಸುವವರೆಗೆ ಬೈಕ್ ಟ್ಯಾಕ್ಸಿಗಳು ಕಾರ್ಯಾಚರಣೆ ನಡೆಸುವಂತಿಲ್ಲ ಎಂಬ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಅಗ್ರಿಗೇಟರ್ ಸಂಸ್ಥೆಗಳಾದ ಓಲಾ, ಉಬರ್‌, ರ‍್ಯಾಪಿಡೊ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಪುರಸ್ಕರಿಸಿದೆ.

ಹೈಕೋರ್ಟ್ ಆದೇಶವೇನು? :

ದ್ವಿಚಕ್ರ ವಾಹನ ಮಾಲಕರು ತಮ್ಮ ವಾಹನಗಳನ್ನು ಸಾರಿಗೆ ವಾಹನ (Transport Vehicle) ಎಂದು ನೋಂದಾಯಿಸಲು ಅರ್ಜಿ ಸಲ್ಲಿಸಲು ಮುಕ್ತರಾಗಿದ್ದಾರೆ. ಇಂತಹ ಅರ್ಜಿಗಳನ್ನು ಕಾನೂನು ಪ್ರಕಾರ ಪರಿಗಣಿಸಿ, ವಾಹನ ಮಾಲಕರಿಗೆ ಸಾರಿಗೆ ವಾಹನವಾಗಿ ನೋಂದಣಿ ನೀಡಲು ಮತ್ತು ಕಾಂಟ್ರಾಕ್ಟ್ ಕ್ಯಾರೇಜ್ ಆಗಿ ಕಾರ್ಯನಿರ್ವಹಿಸಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಪ್ರಸ್ತುತ ನಿಯಮಾವಳಿಗಳನ್ನು ಪರಿಶೀಲಿಸಬಹುದಾದರೂ, ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನ ಅಥವಾ ಕಾಂಟ್ರಾಕ್ಟ್ ಕ್ಯಾರೇಜ್ ಆಗಿ ಬಳಸಲು ಸಾಧ್ಯವಿಲ್ಲ ಎಂಬ ಕಾರಣ ನೀಡಿ ಅನುಮತಿ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶದಲ್ಲಿ‌ ಹೇಳಿದೆ.

ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 74(2)ರ ಪ್ರಕಾರ ಅಗತ್ಯವೆಂದು ಕಂಡುಬರುವ ಷರತ್ತುಗಳನ್ನು ವಿಧಿಸಬಹುದು. ಅಗ್ರಿಗೇಟರ್‌ಗಳು ಸಹ ಹೊಸದಾಗಿ ಅರ್ಜಿ ಸಲ್ಲಿಸಲು ಸ್ವತಂತ್ರರಾಗಿದ್ದು, ಅಂತಹ ಅರ್ಜಿಗಳನ್ನು ಈ ಆದೇಶದಲ್ಲಿ ನ್ಯಾಯಾಲಯದ ಅವಲೋಕನಗಳು ಹಾಗೂ ಕಾನೂನಿನ ಚೌಕಟ್ಟಿನಡಿಯಲ್ಲಿ ಪರಿಗಣಿಸಬೇಕು ಎಂದು ತಿಳಿಸಿರುವ ಹೈಕೋರ್ಟ್, ಏಕಸದಸ್ಯ ನ್ಯಾಯಪೀಠದ ಆದೇಶ ರದ್ದುಪಡಿಸಿ, ಮೇಲ್ಮನವಿಗಳನ್ನು ಮಾನ್ಯ ಮಾಡಿದೆ. ವಿಸ್ತೃತ ತೀರ್ಪು ಲಭ್ಯವಾಗಬೇಕಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News