×
Ad

‘ಕುಸುಮ್-ಸಿ’ ಯೋಜನೆ ಗೌರಿಬಿದನೂರಿನಲ್ಲಿ ಜೂ.11 ರಂದು ಉದ್ಘಾಟನೆ : ಸಚಿವ ಕೆ.ಜೆ.ಜಾರ್ಜ್

Update: 2025-06-09 18:51 IST

ಬೆಂಗಳೂರು : ರೈತರ ಕೃಷಿ ಪಂಪ್‍ಸೆಟ್‍ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜೂ.11 ರಂದು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಸೋಮವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಕುಸುಮ್- ಸಿ ಯೋಜನೆಯ ಉದ್ಘಾಟನೆ ಕುರಿತ ಕರ್ಟನ್ ರೈಸರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ.11ರಂದು ಬೆಳಗ್ಗೆ 10.30 ಗಂಟೆಗೆ ಗೌರಿಬಿದನೂರಿನ ನೇತಾಜಿ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಹ್ಲಾದ್ ಜೋಶಿ, ರಾಜ್ಯ ಖಾತೆ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಡಾ.ಎಂ.ಸಿ.ಸುಧಾಕರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದರು.

ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸುವ ಉದ್ದೇಶದಿಂದ ಕುಸುಮ್-ಸಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ನೀರಾವರಿಗೆ ವಿದ್ಯುತ್ ಪೂರೈಸುವ ಫೀಡರ್‍ಗಳ ಬಳಿ ಸೋಲಾರ್ ಘಟಕಗಳನ್ನು ಸ್ಥಾಪಿಸಿ, ವಿದ್ಯುತ್ ಉತ್ಪಾದಿಸಲಾಗುವುದು. ಬಳಿಕ ಅಲ್ಲಿಂದ ಫೀಡರ್‍ಗಳ ಮೂಲಕ ರೈತರ ಕೃಷಿ ಪಂಪ್‍ಸೆಟ್‍ಗಳಿಗೆ ಒದಗಿಸಲಾಗುವುದು. ಸ್ಥಳೀಯವಾಗಿಯೇ ವಿದ್ಯುತ್ ಉತ್ಪಾದಿಸಿ ಪೂರೈಸುವುದರಿಂದ ಗುಣಮಟ್ಟದ ವಿದ್ಯುತ್ ಲಭ್ಯವಾಗುತ್ತದೆ. ಟ್ರಾನ್ಸ್‌ ಫಾರ್ಮರ್‍ಗಳ ಮೇಲಿನ ಹೊರೆಯೂ ಇದರಿಂದ ತಗ್ಗುತ್ತದೆ ಎಂದು ಅವರು ಹೇಳಿದರು.

ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿ ಮತ್ತು ಚರಕಮಟ್ಟೇನಹಳ್ಳಿ ಗ್ರಾಮದ ಸುಮಾರು 60 ಎಕರೆ ಪ್ರದೇಶದಲ್ಲಿ 20 ಮೆ.ವ್ಯಾ. ಸಾಮಥ್ರ್ಯದಲ್ಲಿ ಸೋಲಾರ್ ಘಟಕ ಸ್ಥಾಪಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಕುಸುಮ್- ಸಿ ಯೋಜನೆಯಡಿ ಸ್ಥಾಪಿಸಲಾಗಿರುವ ಅತಿ ದೊಡ್ಡ ಘಟಕವಿದು. ಹೀಗಾಗಿ ಗೌರಿಬಿದನೂರಿನಲ್ಲಿ ಯೋಜನೆಯನ್ನು ಉದ್ಘಾಟಿಸಲು ನಿರ್ಧರಿಸಲಾಗಿದೆ. ಇಲ್ಲಿ ಖಾಸಗಿ ಜಮೀನನ್ನು 25 ವರ್ಷಕ್ಕೆ ಭೋಗ್ಯಕ್ಕೆ ಪಡೆಯಲಾಗಿದೆ ಎಂದು ಜಾರ್ಜ್ ವಿವರಿಸಿದರು.

ನಮ್ಮ ಸರಕಾರ ಬಂದ ಮೇಲೆ ಕುಸುಮ್-ಸಿ ಜಾರಿ: ಕುಸುಮ್-ಸಿ ಯೋಜನೆ ನಾಲ್ಕೈದು ವರ್ಷ ಹಿಂದೆಯೇ ಜಾರಿಯಾಗಿತ್ತಾದರೂ ರಾಜ್ಯದಲ್ಲಿ ಮಾತ್ರ ಅದನ್ನು ಶೀಥಲಗೃಹದಲ್ಲಿಟ್ಟಿದ್ದರು. ನಮ್ಮ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಯೋಜನೆ ಜಾರಿಗೊಳಿಸಲು ನಿರ್ಧರಿಸಿ, ಟೆಂಡರ್ ಕರೆಯಲಾಯಿತು ಎಂದು ಅವರು ಸ್ಪಷ್ಪಪಡಿಸಿದರು.

ಒಂದು ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆಗೆ 3.5 ಕೋಟಿ ರೂ.ನಿಂದ 4 ಕೋಟಿ ರೂ.ವರೆಗೆ ವೆಚ್ಚ ಆಗುತ್ತದೆ. ಈ ಪೈಕಿ 1 ಕೋಟಿ ರೂ. ಕೇಂದ್ರ ಸರಕಾರದಿಂದ ಸಬ್ಸಿಡಿ ಬರುತ್ತದೆ. ಈ ಎಲ್ಲ ಅಂಶಗಳನ್ನು ಆಧರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಪ್ರತಿ ಯೂನಿಟ್ ವಿದ್ಯುತ್‍ಗೆ ಗರಿಷ್ಠ 3.17 ರೂ. ನಿಗದಿಪಡಿಸಿದೆ ಎಂದು ಜಾರ್ಜ್ ಮಾಹಿತಿ ನೀಡಿದರು.

ಕುಸುಮ್-ಸಿ ಮೊದಲ ಹಂತದಲ್ಲಿ ಕೃಷಿ ಫೀಡರ್‍ಗಳ ಸೋಲರೈಸೇಷನ್ ಮೂಲಕ 2,400 ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆ ಗುರಿ ಹಾಕಿಕೊಂಡಿದ್ದು ಸುಮಾರು 6.19 ಲಕ್ಷ ಕೃಷಿ ಪಂಪ್‍ಸೆಟ್‍ಗಳಿಗೆ ಹಗಲು ವೇಳೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಕೆಲಸ ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು.

ಈಗಾಗಲೇ ಸುಮಾರು 200 ಮೆ.ವ್ಯಾ.ಸಾಮಥ್ರ್ಯದ ಸೋಲಾರ್ ಘಟಕಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇನ್ನು ಕೆಲವೇ ತಿಂಗಳುಗಳಲ್ಲಿ 93 ಸ್ಥಳಗಳಲ್ಲಿ 545 ಮೆ.ವ್ಯಾ. ಸಾಮಥ್ರ್ಯದ ಸೋಲಾರ್ ಘಟಕಗಳು ಚಾಲನೆಗೊಳ್ಳಲಿವೆ. ಡಿಸೆಂಬರ್-2025ರ ವೇಳೆಗೆ 2,400 ಮೆ.ವ್ಯಾ. ಸಾಮಥ್ರ್ಯದ ಸೌರ ಘಟಕಗಳ ಸ್ಥಾಪನೆಯ ಗುರಿಯನ್ನು ಸಾಧಿಸಲಾಗುವುದು ಎಂದು ಜಾರ್ಜ್ ಮಾಹಿತಿ ನೀಡಿದರು.

ತಾಂತ್ರಿಕ ಸಾಧ್ಯತೆ ಇರುವ ವಿದ್ಯುತ್ ಉಪ ಕೇಂದ್ರಗಳ ಬಳಿ ಸೌರ ಘಟಕಗಳ ಸ್ಥಾಪನೆಗೆ ನಿರ್ಧರಿಸಲಾಗಿದೆ. ಖಾಸಗಿಯವರು ಸೌರ ಘಟಕಗಳನ್ನು ಸ್ಥಾಪಿಸಿ, ವಿದ್ಯುತ್ ಉತ್ಪಾದಿಸುತ್ತಾರೆ. ಅದನ್ನು ಸರಕಾರ ಖರೀದಿಸಿ ಆಯಾ ಫೀಡರ್‍ಗಳ ವ್ಯಾಪ್ತಿಯ ಕೃಷಿ ಪಂಪ್‍ಸೆಟ್‍ಗಳಿಗೆ ಪೂರೈಸುತ್ತದೆ. ಹಗಲು ವೇಳೆ ಸೌರ ವಿದ್ಯುತ್ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವುದರಿಂದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ಸಮರ್ಪಕ ವಿದ್ಯುತ್ ಲಭ್ಯವಾಗಲಿದೆ ಎಂದು ಅವರು ತಿಳಿಸಿದರು.

ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ 4 ಎಕರೆ ಭೂಮಿ ಅಗತ್ಯವಿದೆ. ಸರಕಾರಿ ಭೂಮಿ ಲಭ್ಯವಿದ್ದರೆ ಅದನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಆದರೆ, ಆ ಭೂಮಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಅನ್ನು ಖಾಸಗಿ ವಿದ್ಯುತ್ ಉತ್ಪಾದಕರು ಪಾವತಿಸಬೇಕು. ಆ ಮೊತ್ತವನ್ನು ಜಿಲ್ಲಾಧಿಕಾರಿಗಳ ಬಳಿ ಇಟ್ಟು ಉಪ ಕೇಂದ್ರ ಇರುವ ಗ್ರಾಮದ ಸರಕಾರಿ ಶಾಲೆ, ಅಂಗನವಾಡಿಗಳ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು. ಖಾಸಗಿ ಭೂಮಿಯಾಗಿದ್ದರೆ, ವಿದ್ಯುತ್ ಉತ್ಪಾದನೆ ಗುತ್ತಿಗೆ ಪಡೆದ ಡೆವಲಪರ್‍ಗಳು ಗುತ್ತಿಗೆಗೆ ತೆಗೆದುಕೊಂಡು, ಭೂಮಾಲಕರಿಗೆ ಎಕರೆಗೆ ಕನಿಷ್ಠ 25 ಸಾವಿರ ರೂ. ಪರಿಹಾರ ನೀಡುತ್ತಾರೆ ಎಂದು ಜಾರ್ಜ್ ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಇಂಧನ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ್, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕ್ರೆಡಲ್) ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಎಚ್.ಜೆ.ರಮೇಶ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News