KPSC ನೇಮಕಾತಿ ಅಕ್ರಮ | ಇಬ್ಬರು ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ನೂತನ ಎಸ್‌ಐಟಿ ರಚನೆಗೆ ಹೈಕೋರ್ಟ್ ಆದೇಶ
ಆರ್.ಹಿತೇಂದ್ರ, ಸೌಮೇಂದು ಮುಖರ್ಜಿ
ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಅಕ್ರಮಗಳ ಪ್ರಕರಣದ ತನಿಖೆಗಾಗಿ ಹಿರಿಯ ಐಪಿಎಸ್ ಅಧಿಕಾರಿಗಳಾದ ಆರ್.ಹಿತೇಂದ್ರ ಹಾಗೂ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ನೂತನ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದ್ದು, ಈಗಾಗಲೇ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿಯ ಯಾವುದೇ ಅಧಿಕಾರಿಯನ್ನು ನೂತನ ಎಸ್‌ಐಟಿ ತಂಡದಲ್ಲಿ ಸೇರಿಸಬಾರದು ಎಂದು ಸ್ಪಷ್ಟವಾಗಿ ನಿರ್ದೇಶಿಸಿದೆ. ಅಲ್ಲದೆ, ಎಸ್‌ಐಟಿಗೆ ಅಗತ್ಯವಿರುವ ಕಚೇರಿ ಹಾಗೂ ಸಿಬ್ಬಂದಿಯನ್ನು ಸರ್ಕಾರ ಕೂಡಲೇ ಒದಗಿಸಬೇಕು ಎಂದು ಆದೇಶಿಸಿದೆ.
ಈಗಾಗಲೇ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಈಡಿ.) ಹಾಗೂ ನೂತನ ಎಸ್‌ಐಟಿ ಸಮನ್ವಯದಿಂದ ತನಿಖೆ ಮುಂದುವರಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.
ಈ ಹಿಂದೆ ಆಲೋಕ್ ಕುಮಾರ್ ನೇತೃತ್ವದಲ್ಲಿ ಎಸ್‌ಐಟಿ ರಚಿಸುವಂತೆ ಹೈಕೋರ್ಟ್ ಆದೇಶಿಸಿತ್ತು. ಆದರೆ, ಈ ಆದೇಶವನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಬೇರೆ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್‌ಐಟಿ ರಚಿಸುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಇದೀಗ ಆರ್. ಹಿತೇಂದ್ರ ಹಾಗೂ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ನೂತನ ಎಸ್‌ಐಟಿ ರಚನೆಗೆ ಆದೇಶಿಸಿದೆ.