ವಿದ್ಯಾರ್ಥಿಗಳಿಗೆ ಮುಖಚರ್ಯೆ ಆಧಾರಿತ ಹಾಜರಾತಿ ವ್ಯವಸ್ಥೆ : ಕೃಷ್ಣಬೈರೇಗೌಡ
ಬೆಂಗಳೂರು : ಜಿಬಿಎ ವ್ಯಾಪ್ತಿಯ ಎಲ್ಲ 5 ನಗರ ಪಾಲಿಕೆಗಳ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮುಖಚರ್ಯೆ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಶಿಕ್ಷಣ ವಿಭಾಗದ ವಿಶೇಷ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳು, ಯೋಜನೆಗಳು, ಕಾರ್ಯಕ್ರಮಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಕೌನ್ಸಿಲ್ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ರಾಜ್ಯದ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮುಖಚರ್ಯೆ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಯಲ್ಲಿದ್ದು, ಅದೇ ಮಾದರಿಯಲ್ಲಿ ಪಾಲಿಕೆ ಶಾಲೆಗಳಲ್ಲಿಯೂ ಅಳವಡಿಸಿಕೊಳ್ಳುವಂತೆ ಸೂಚಿಸಿದರು.
ಶಾಲಾ ಮಕ್ಕಳಿಗೆ ಸಮವಸ್ತ್ರಗಳನ್ನು ನಿಗದಿತ ಸಮಯದಲ್ಲಿ ವಿತರಿಸಬೇಕು. ಈ ಸಂಬಂಧ ಕೂಡಲೇ ಸಮವಸ್ತ್ರಗಳನ್ನು ವಿತರಿಸುವ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಪಾಲಿಕೆಗಳಲ್ಲಿನ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳೋಣ ಎಂದು ಕೃಷ್ಣ ಬೈರೇಗೌಡ ಹೇಳಿದರು.
ಶಾಲಾ-ಕಾಲೇಜುಗಳಲ್ಲಿ ಶೌಚಾಲಯಗಳ ವ್ಯವಸ್ಥೆ ಸಮರ್ಪಕವಾಗಿರಬೇಕು. ಈ ಸಂಬಂಧ ಸಿಎಸ್‍ಆರ್ ಅನುದಾನದ ಮೂಲಕ ಅಗತ್ಯವಿದ್ದಲ್ಲಿ ಶೌಚಾಲಯಗಳನ್ನು ನಿರ್ಮಿಸಿ, ಅವುಗಳ ಸಮರ್ಪಕ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು ಎಂದು ಕೃಷ್ಣ ಬೈರೇಗೌಡ ತಿಳಿಸಿದರು.
ಜಿಬಿಎ ವ್ಯಾಪ್ತಿಯಲ್ಲಿ 94 ನರ್ಸರಿ, 18 ಪ್ರಾಥಮಿಕ, 36 ಪ್ರೌಢ, 21 ದ್ವಿತೀಯ, 4 ಪದವಿ ಹಾಗೂ 2 ಸ್ನಾತಕೋತ್ತರ ಸೇರಿದಂತೆ ಒಟ್ಟು 175 ಪಾಲಿಕೆ ಶಿಕ್ಷಣ ಸಂಸ್ಥೆಗಳಿದ್ದು, ಪ್ರಸಕ್ತ ಸಾಲಿನಲ್ಲಿ ಒಟ್ಟಾರೆ 22,210 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪಾಲಿಕೆ ಶಾಲೆಗಳಲ್ಲಿ 115 ಖಾಯಂ ಹಾಗೂ 841 ಅತಿಥಿ ಶಿಕ್ಷಕರು ಸೇರಿದಂತೆ ಒಟ್ಟು 956 ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ವಿಶೇಷ ಆಯುಕ್ತರು ಈ ವೇಳೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಸುಷಮಾ ಗೋಡಬೋಲ್, ನಿತೀಶ್, ವೆಂಕಟಾಚಲಪತಿ, ನಗರ ಪಾಲಿಕೆ ಆಯುಕ್ತರಾದ ರಮೇಶ್ ಡಿ.ಎಸ್., ಪೊಮ್ಮಲ ಸುನೀಲ್ ಕುಮಾರ್, ರಮೇಶ್ ಕೆ.ಎನ್., ಜಿ.ಜಗದೀಶ್, ಡಾ.ರಾಜೇಂದ್ರ ಕೆ.ವಿ., ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಸಿಇಒ ಕರೀಗೌಡ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ವೈಟ್ ಟಾಪಿಂಗ್‍ಗೆ ವೇಗ ನೀಡಿ: ‘ನಗರದಲ್ಲಿ 1,700 ಕೋಟಿ ರೂ. ವೆಚ್ಚದಲ್ಲಿ 120.60 ಕಿ.ಮೀ. ಉದ್ದದ 117 ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಪೈಕಿ 61.43 ಕಿ.ಮೀ. ಕಾಮಗಾರಿ ಪೂರ್ಣಗೊಂಡಿದೆ. ಬಾಕಿ ಇರುವ 59.26 ಕಿ.ಮೀ. ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು.