ಕುಡುಪು ಅಶ್ರಫ್ ಗುಂಪು ಹತ್ಯೆ ಪ್ರಕರಣ: ವಿಶೇಷ ತನಿಖಾ ತಂಡ ರಚನೆಗೆ ಜಸ್ಟೀಸ್ ಫಾರ್ ಅಶ್ರಫ್ ಆ್ಯಕ್ಷನ್ ಕಮಿಟಿ ಒತ್ತಾಯ
ಬೆಂಗಳೂರು: ಇತ್ತೀಚೆಗೆ ಮಂಗಳೂರಿನ ಕುಡುಪು ಎಂಬಲ್ಲಿ ನಡೆದ ಕೇರಳ ವಯನಾಡಿನ ಅಶ್ರಫ್ ಗುಂಪು ಹತ್ಯೆ ಪ್ರಕರಣದ ತನಿಖೆಯನ್ನು ತ್ವರಿತಗೊಳಿಸುವಂತೆ ಜಸ್ಟೀಸ್ ಫಾರ್ ಅಶ್ರಫ್ ಆ್ಯಕ್ಷನ್ ಕಮಿಟಿಯ ಕೇರಳ ಮತ್ತು ಮಂಗಳೂರಿನ ಸಮಿತಿಗಳ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಒತ್ತಾಯಿಸಿದೆ.
ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ನೇತೃತ್ವದಲ್ಲಿ ಸಿದ್ದರಾಮಯ್ಯರನ್ನು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾದ ನಿಯೋಗವು ಈ ಗುಂಪು ಹತ್ಯೆ ಸಾರ್ವಜನಿಕ ಸುರಕ್ಷತೆ ಮತ್ತು ನ್ಯಾಯದ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ. ಆದ್ದರಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ. ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು. ತ್ವರಿತ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಬೇಕು. ವಿಶೇಷ ಅಭಿಯೋಜಕರನ್ನು ನೇಮಕ ಮಾಡಬೇಕು ಎಂದು ಮುಖ್ಯಮಂತ್ರಿಯನ್ನು ಒತ್ತಾಯಿಸಿದೆ.
ಈ ಅಮಾನವೀಯ ಗುಂಪು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಪ್ರಮುಖ ಆರೋಪಿಗಳನ್ನು ಗುರುತಿಸಿ ಅವರನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು. ಜೊತೆಗೆ ಆರ್ಥಿಕವಾಗಿ ತೀರಾ ಸಂಕಷ್ಟದಲ್ಲಿರುವ ಅಶ್ರಫ್ ರ ಕುಟುಂಬಕ್ಕೆ ಪರಿಹಾರ ಕಲ್ಪಿಸಬೇಕು. ಆ ಮೂಲಕ ಸಂತ್ರಸ್ತ ಕುಟುಂಬಕ್ಕೆ ನೈತಿಕ ಬೆಂಬಲ ನೀಡಬೇಕು ಎಂದು ಜಸ್ಟೀಸ್ ಫಾರ್ ಅಶ್ರಫ್ ಆ್ಯಕ್ಷನ್ ಕಮಿಟಿಯ ನಿಯೋಗ ಮುಖ್ಯಮಂತ್ರಿಗೆ ಮನವಿ ಮಾಡಿದೆ.
ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ, ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ.
ನಿಯೋಗದಲ್ಲಿ ಅಶ್ರಫ್ ತಂದೆ-ತಾಯಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕೆ.ಅಶ್ರಫ್, ಜಲೀಲ್ ಕೃಷ್ಣಾಪುರ ಮತ್ತಿತರರು ಉಪಸ್ಥಿತರಿದ್ದರು.