×
Ad

ಬಿಜೆಪಿಯವರಿಗೆ ಸುಳ್ಳು ಹೇಳುವುದು ಬಿಟ್ಟು ಬೇರೆ ಏನೂ ಗೊತ್ತಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್

Update: 2024-11-10 22:41 IST

ಶಿಗ್ಗಾಂವಿ : "ದೇಶ ಕಟ್ಟುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಕಾಂಗ್ರೆಸ್ ಪಕ್ಷ. ಬಿಜೆಪಿಯವರಿಗೆ ಸುಳ್ಳು ಹೇಳುವುದು ಬಿಟ್ಟು ಬೇರೆ ಏನೂ ಗೊತ್ತಿಲ್ಲ. ಸುಳ್ಳೇ ಅವರ ಮನೆ ದೇವರು‌" ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ನಿಮಿತ್ತ ತಾಲೂಕು ಕ್ರೀಡಾಂಗಣದಲ್ಲಿ ರವಿವಾರ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಜನರ ದಾರಿ ತಪ್ಪಿಸುವುದೇ ಬಿಜೆಪಿಯವರ ಅಜೆಂಡಾ ಎಂದು ಟೀಕಿಸಿದರು.

ಕಳೆದ ಐದು ದಿನಗಳಿಂದ ಕ್ಷೇತ್ರದಾದ್ಯಂತ ಸಂಚರಿಸುತ್ತಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಪರ ಉತ್ತಮ ವಾತಾವರಣವಿದೆ, ಈ ಬಾರಿ ಕಾಂಗ್ರೆಸ್ ಗೆಲುವು ಖಚಿತ‌ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ ಚುನಾಚಣೆಯಲ್ಲಿ ಸೋತರೂ ಜನರೊಂದಿಗೆ ಬೆರೆತು ಕ್ಷೇತ್ರದ ಸೇವೆ ಮಾಡುತ್ತಾ ಬಂದಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್, ಸಾಮಾನ್ಯರಲ್ಲಿ ಸಾಮಾನ್ಯ ವ್ಯಕ್ತಿ. ಇಂಥ ವ್ಯಕ್ತಿಯನ್ನು ಬೆಂಬಲಿಸಿ ಶಾಸಕನಾಗಿ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.

ಈ‌ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರಾದ ‌ಶಿವಾನಂದ ಪಾಟೀಲ್, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಎಚ್.ಕೆ.ಪಾಟೀಲ್, ‌ಶಿವರಾಜ್ ತಂಗಡಗಿ, ಮಂಕಾಳ್ ವೈದ್ಯ, ಕೆ.ಎಚ್. ಮುನಿಯಪ್ಪ,‌ ಭೈರತಿ ಸುರೇಶ್, ‌ಡಿ.ಸುಧಾಕರ್, ಆರ್.ಬಿ.ತಿಮ್ಮಾಪೂರ,‌ ರಹೀಂ‌ ಖಾನ್, ಮಾಜಿ‌ ಸಚಿವ ಪ್ರಕಾಶ್ ಹುಕ್ಕೇರಿ ಸೇರಿದಂತೆ ಹಲವು ಶಾಸಕರು, ‌ಮಾಜಿ‌ ಶಾಸಕರು, ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News