ಜಮೀನು ಹಂಚಿಕೆ ಆರೋಪ: ಖಾಸಗಿ ದೂರಿನ ಪ್ರತಿ ಸಲ್ಲಿಸಲು ದೂರುದಾರರಿಗೆ ಹೈಕೋರ್ಟ್ ಸೂಚನೆ
Update: 2026-08-18 23:33 IST
ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತವರ ಕುಟುಂಬ ಸದಸ್ಯರ ಒಡೆತನದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (ಬಿಡಿಎ) ನಿಯಮಬಾಹಿರವಾಗಿ ನಾಗರಿಕ ಸೌಲಭ್ಯ (ಸಿಎ) ನಿವೇಶನ ಹಾಗೂ 2 ಎಕರೆ ಜಮೀನು ಮಂಜೂರು ಮಾಡಲಾಗಿದೆ ಎಂದು ಆರೋಪಿಸಿ ವಿಚಾರಣಾ ನ್ಯಾಯಾಲಯದಲ್ಲಿ ಹೂಡಿರುವ ಖಾಸಗಿ ದೂರಿನ ಪ್ರತಿ ಸಲ್ಲಿಸುವಂತೆ ಪ್ರಕರಣದ ದೂರುದಾರರಿಗೆ ಹೈಕೋರ್ಟ್ ಸೂಚಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದ ಖಾಸಗಿ ದೂರಿನ ತನಿಖೆಯನ್ನು ಲೋಕಾಯುಕ್ತ ಪೊಲೀಸರಿಗೆ ವಹಿಸದೆ ತಾನೇ ನೇರವಾಗಿ ವಿಚಾರಣೆ ನಡೆಸಲು ನಿರ್ಧರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮ ಪ್ರಶ್ನಿಸಿ ದೂರುದಾರರೂ ಆದ ‘ಲಂಚ ಮುಕ್ತ ಕರ್ನಾಟಕ ವೇದಿಕೆ’ ರಾಜ್ಯಾಧ್ಯಕ್ಷ ವಿಜಯರಾಘವ ಮರಾಠೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಅರ್ಜಿದಾರರಿಗೆ ಈ ಸೂಚನೆ ನೀಡಿ, ಅರ್ಜಿ ವಿಚಾರಣೆ ಮುಂದೂಡಿತು.