×
Ad

ರಾಜ್ಯದಲ್ಲಿ ಜನಸಂದಣಿ ನಿರ್ವಹಣೆಗೆ ಬರಲಿದೆ ಕಾನೂನು: ಕರಡು ಸಿದ್ಧ

Update: 2025-06-16 11:38 IST
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಇತ್ತೀಚೆಗೆ ಸಂಭವಿಸಿದ ಕಾಲ್ತುಳಿತಕ್ಕೆ ಸಾಕ್ಷಿಯಾಗಿ ರಾಶಿ ಬಿದ್ದಿದ್ದ ಪಾದರಕ್ಷೆಗಳು(ಫೈಲ್ ಚಿತ್ರ)

ಬೆಂಗಳೂರು: ಬೃಹತ್ ಕಾರ್ಯಕ್ರಮಗಳಲ್ಲಿ ಜನಸಂದಣಿ ನಿರ್ವಹಣೆಗೆ ಕಾನೂನು ಜಾರಿಗೆ ತರಲು ರಾಜ್ಯ ಸರಕಾರ ಮುಂದಾಗಿದೆ.

ಈ ವಿಚಾರವಾಗಿ ಶನಿವಾರ ಕಲಬುರಗಿಯಲ್ಲಿ ಮಾತನಾಡಿದ ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಬೃಹತ್ ಕಾರ್ಯಕ್ರಮಗಳಲ್ಲಿ ಜನಸಂದಣಿ ನಿರ್ವಹಣೆ ಕಾನೂನು ಜಾರಿಗೆ ತರುವ ನಿಟ್ಟಿನಲ್ಲಿ ಕರಡು ವಿಧೇಯಕ ಸಿದ್ಧಗೊಳಿಸಿದ್ದು, ಶೀಘ್ರವೇ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಈ ನೂತನ ಕಾನೂನಿನಲ್ಲಿ ಕ್ರಿಕೆಟ್, ಫುಟ್ಬಾಲ್, ಮದುವೆ ಸಮಾರಂಭಗಳು ಹಾಗೂ ರಾಜಕೀಯ ಕಾರ್ಯಕ್ರಮಗಳಿಗೆ ಗರಿಷ್ಠ ಎಷ್ಟು ಮಂದಿ ಸೇರಬಹುದು ಎಂಬ ನಿಯಮ ಇರಲಿದೆ ಎಂದೂ ಹೇಳಿದ್ದಾರೆ.

ರೇಸ್ ಕೋರ್ಸ್ ಸ್ಥಳಾಂತರ ಮಾಡುವ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರೇಸ್ ಕೋರ್ಸ್ ಅವರನ್ನು ಕರೆದು ಮಾತನಾಡಿದ್ದಾರೆ. ಅದೇರೀತಿ ಚಿನ್ನಸ್ವಾಮಿ ಕ್ರೀಡಾಂಗಣವನ್ನೂ ಸಹ ಬೇರೆಡೆ ಸ್ಥಳಾಂತರ ಮಾಡಬೇಕು ಎನ್ನುವ ಚರ್ಚೆ ನಡೆದಿದೆ ಎಂದು ಸಚಿವರು ತಿಳಿಸಿದ್ದಾರೆ.

ಮಧ್ಯಂತರ ಅರ್ಜಿ ಸಲ್ಲಿಸಿದ್ದ ಮೋಹನ್ ಕುಮಾರ್ ಕೊಂಡಜ್ಜಿ

ಆರ್.ಸಿ.ಬಿ. ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ಸಂದರ್ಭ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಈ ನಡುವೆ ಮಧ್ಯಂತರ ಅರ್ಜಿ ಸಲ್ಲಿಸಿರುವ ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ್ ಕುಮಾರ್ ಕೊಂಡಜ್ಜಿ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿಯವರ ವರದಿಯಲ್ಲಿ ಸೂಚಿಸಿರುವಂತೆ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ಕಾನೂನುಬಾಹಿರವಾಗಿ ಸ್ಟೇಡಿಯಂ ಅನ್ನು ವ್ಯವಹಾರಕ್ಕೆ ಬಳಸುತ್ತಿರುವುದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು.

ಅಲ್ಲದೆ, ಜನಸಂದಣಿ ನಿರ್ವಹಣೆಗೆ ಸಂಬಂಧಿಸಿ ಡಿಸಾಸ್ಟರ್ ಮ್ಯಾನೇಜ್ ಮೆಂಟ್ ನ ಕಾನೂನುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದೂ ಅರ್ಜಿಯಲ್ಲಿ ಮನವಿ ಮಾಡಿರುವುದಾಗಿ ಮೋಹನ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News