ಸಾಂದರ್ಭಿಕ ಚಿತ್ರ | PC : Gemini AI

ಬೆಂಗಳೂರು : ಎಲ್‍ಪಿಜಿ ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿನ ಸಮಸ್ಯೆಯಿಂದಾಗಿ ಹೋಟೆಲ್ ಉದ್ಯಮ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದೆ. ಈ ಬಿಕ್ಕಟ್ಟು ಬಗೆಹರಿಸಿ ಕೂಡಲೇ ಅಗತ್ಯ ವಾಣಿಜ್ಯ ಸಿಲಿಂಡರ್ ಪೂರೈಕೆ ಮಾಡಬೇಕು ಎಂದು ಕೇಂದ್ರ ಸರಕಾರಕ್ಕೆ ದಕ್ಷಿಣ ಭಾರತ ಹೋಟೆಲ್‍ಗಳು, ರೆಸ್ಟೋರೆಂಟ್‍ಗಳ ಸಂಘ ಹಾಗೂ ರಾಜ್ಯ ಹೋಟೆಲುಗಳ ಸಂಘ ಮನವಿ ಮಾಡಿದೆ.

ಈ ಕುರಿತು ದಕ್ಷಿಣ ಭಾರತ ಹೋಟೆಲ್‍ಗಳು ಮತ್ತು ರೆಸ್ಟೋರೆಂಟ್‍ಗಳ ಸಂಘದ ಅಧ್ಯಕ್ಷ ಕೆ.ಶ್ಯಾಮರಾಜು ಹಾಗೂ ರಾಜ್ಯ ಹೋಟೆಲುಗಳ ಸಂಘದ ಅಧ್ಯಕ್ಷ ಜಿ.ಕೆ.ಶೆಟ್ಟಿ ಇತ್ತೀಚಿಗೆ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಜಾಗತಿಕ ಸಂಘರ್ಷದಿಂದಾಗಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದರಿಂದಾಗಿ ಹೋಟೆಲ್ ಉದ್ಯಮಕ್ಕೆ ಭಾರೀ ಪೆಟ್ಟು ಬಿದ್ದಿದೆ. ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖವಾಗಿ ರೆಸ್ಟೋರೆಂಟ್ ಹಾಗೂ ಹೋಟೆಲ್‍ಗಳು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ದೇಶದ ಆರ್ಥಿಕತೆಯಲ್ಲಿ ಹೋಟೆಲ್ ಉದ್ಯಮ ಪ್ರಮುಖ ಪಾತ್ರ ವಹಿಸುತ್ತಿದೆ. ಈ ನಿಟ್ಟಿನಲ್ಲಿಕೇಂದ್ರ ಸರಕಾರ ಕೂಡಲೇ ಮಧ್ಯ ಪ್ರವೇಶಿಸಿ ಉಂಟಾಗಿರುವ ಎಲ್‍ಪಿಜಿ ವಾಣಿಜ್ಯ ಸಿಲಿಂಡರ್ ಬಿಕ್ಕಟ್ಟಿನ ಸಮಸ್ಯೆಯನ್ನು ಶೀಘ್ರ ಪರಿಹರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ʼಯುದ್ಧದ ಪರಿಣಾಮ ದೇಶವ್ಯಾಪಿ ಅಡುಗೆ ಅನಿಲ ಪೂರೈಕೆಯಲ್ಲಿ ಬಿಕ್ಕಟ್ಟು ಎದುರಾಗಿದೆ. ಸದ್ಯ ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡುವುದರ ಜೊತೆಗೆ ಹೋಟೆಲ್, ಪ್ರವಾಸೋದ್ಯಮ ಇತರೆ ಉದ್ದಿಮೆಗಳ ಸಮಸ್ಯೆಗಳನ್ನು ಆದ್ಯತೆಯಾಗಿ ಪರಿಗಣಿಸಲಾಗುವುದು. ಅವಶ್ಯಕತೆಗೆ ಅನುಗುಣವಾಗಿ ಮಾಸಿಕ ಶೇ.20 ರಷ್ಟು ವಾಣಿಜ್ಯ ಸಿಲಿಂಡರ್ ತುರ್ತು ಉದ್ದಿಮೆಗಳಿಗೆ ಪೂರೈಸಲಾಗುವುದು. ಹೋಟೆಲ್, ರೆಸ್ಟೋರೆಂಟ್‍ಗಳನ್ನು ಆದ್ಯತೆಯಾಗಿ ಪರಿಗಣಿಸಿ ಹೆಚ್ಚುವರಿ ಪೂರೈಕೆಗೆ ಕ್ರಮವಹಿಸಲಾಗುವುದು. ಉಂಟಾಗಿರುವ ಬಿಕ್ಕಟ್ಟನ್ನು ಬಗೆಹರಿಸಲು ಕೇಂದ್ರ ಸರಕಾರ ಬದ್ಧವಾಗಿದ್ದು ಸಮನ್ವಯದಿಂದ ಎದುರಿಸಲಿದೆ ಎಂದು ಕೇಂದ್ರ ಸಚಿವರು ಭರವಸೆ ನೀಡಿದ್ದಾರೆʼ ಎಂದು ಕೆ.ಶ್ಯಾಮರಾಜು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor