×
Ad

ಗಡಿಪಾರು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ; ಶನಿವಾರಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

Update: 2026-01-30 23:08 IST

ಬೆಂಗಳೂರು : ದಕ್ಷಿಣ‌ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಶನಿವಾರಕ್ಕೆ ಮುಂದೂಡಿದ.

ಪುತ್ತೂರು ಉಪ ವಿಭಾಗಾಧಿಕಾರಿ 2025ರ ಡಿಸೆಂಬರ್ 17ರಂದು ಹೊರಡಿಸಿರುವ ಆದೇಶ ರದ್ದುಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ನಿಗದಿಯಾಗಿತ್ತು.

ಅರ್ಜಿದಾರರ ಪರ ವಕೀಲರು, ಪ್ರಕರಣ ಸಂಬಂಧ ಮಹೇಶ್‌ ತಿಮರೋಡಿ ಅವರ ಆಕ್ಷೇಪಣೆ ಪರಿಗಣಿಸದೆ ಗಡಿಪಾರು ಆದೇಶ ಮಾಡಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಸರ್ಕಾರಿ ಅಭಿಯೋಜಕರು, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಾಗುವುದು. ಅದಕ್ಕೆ ಒಂದು ದಿನ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಈ ಮನವಿ ಪರಿಗಣಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ:

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷದ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಉಪ ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ಈ ಆದೇಶ ಪ್ರಶ್ನಿಸಿ ತಿಮರೋಡಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು‌.

ಅರ್ಜಿಯನ್ನು 2025ರ ನವೆಂಬರ್ 17ರಂದು ಭಾಗಶಃ ಪುರಸ್ಕರಿಸಿದ್ದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಗಡಿಪಾರು ಆದೇಶ ಹೊರಡಿಸುವ ಮುನ್ನ ತಿಮರೋಡಿ ಅವರಿಗೆ ವಿವರಣೆ ಹಾಗೂ ಮನವಿ ಸಲ್ಲಿಸಲು ಸೂಕ್ತ ಅವಕಾಶ ನೀಡದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇದರಿಂದ, ಗಡಿಪಾರು ಆದೇಶ ರದ್ದುಪಡಿಸಲಾಗುತ್ತಿದೆ ಎಂದು ಆದೇಶಿಸಿತ್ತು.

ಜತೆಗೆ, ಪ್ರಕರಣವನ್ನು ಪುತ್ತೂರು ಉಪ ವಿಭಾಗಾಧಿಕಾರಿಗೆ ಹಿಂದಿರುಗಿಸಿದ್ದ ನ್ಯಾಯಾಲಯ, ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಬೇಕು. ವಿಚಾರಣೆ ವೇಳೆ ಅರ್ಜಿದಾರರ ಅಹವಾಲನ್ನೂ ಆಲಿಸಿ, ನಂತರ ಸೂಕ್ತ ಕಾರಣಗಳೊಂದಿಗೆ ಕಾನೂನು ಪ್ರಕಾರ ಆದೇಶ ಹೊರಡಿಸಬೇಕು ಎಂದು ನಿರ್ದೇಶಿಸಿತ್ತು. ಹೈಕೋರ್ಟ್ ನಿರ್ದೇಶನದಂತೆ ಪ್ರಕರಣವನ್ನು ಹೊಸದಾಗಿ ಪರಿಗಣಿಸಿದ್ದ ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು, ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಡಿಸೆಂಬರ್ 17ರಂದು ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ತಿಮರೋಡಿ ಮತ್ತೊಮ್ಮೆ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News