Mandya | ಪೊಲೀಸರ ದೌರ್ಜನ್ಯ ಖಂಡಿಸಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ

Update: 2026-07-22 21:55 IST

ಮಂಡ್ಯ: ನೀಟ್ ಪರೀಕ್ಷಾ ಅಕ್ರಮ ಸಂಬಂಧ ಸಂಸತ್ ಚಲೋ ಕೈಗೊಂಡಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯಕ್ಕೆ ಜಿಲ್ಲೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಯುವ ಕಾಂಗ್ರೆಸ್ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಗುರುವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದರು.

ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್) ಆವರಣದಿಂದ ಮೆರವಣಿಗೆ ಹೊರಟ ವಿದ್ಯಾರ್ಥಿಗಳು, ಪ್ರಮುಖ ರಸ್ತೆಗಳಲ್ಲಿ ಸಾಗಿ ಬೆಂಗಳೂರು ಮೈಸೂರು ಹೆದ್ದಾರಿಯ ಸಂಜಯ ವೃತ್ತದಲ್ಲಿ ಧರಣಿ ನಡೆಸಿ ಕೇಂದ್ರ ಸರಕಾರ, ಪ್ರಧಾನಿ ಮೋದಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೇನಾಮೆ ನೀಡಬೇಕು. ಇಲ್ಲವೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದರು.

ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ನೀಡಿದ ಶಾಸಕ ಪಿ.ರವಿಕುಮಾರ್ ಗಣಿಗ ಮಾತನಾಡಿ, ದುಡ್ಡು ಹೊಡೆಯಲು ಕೆಲವು ಬಿಜೆಪಿಯವರು ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಿ ಲಕ್ಷಾಂತರ ಮಕ್ಕಳ ಭವಿಷ್ಯದ ಜತೆ ಆಟವಾಡುತ್ತಿದ್ದಾರೆ. ಕೇಂದ್ರದ ಬಿಜೆಪಿ ಸರಕಾರಕ್ಕೆ ವಿದ್ಯಾರ್ಥಿಗಳ ಮೇಲೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಆರೋಪಿಸಿದರು.

ವಿದ್ಯಾರ್ಥಿಗಳ ಭವಿಷ್ಯವನ್ನು ಉಳಿಸಿ, ಅವರಿಗೆ ನ್ಯಾಯ ಕೊಡಿಸಿ ಎಂದು ಹೋರಾಟ ನಡೆಸುವುದು ತಪ್ಪೆ? ಪ್ರಧಾನಿ ನರೇಂದ್ರ ಮೋದಿಯವರೇ, ಶೋಕಿ ಮಾಡುವುದನ್ನು ಬಿಟ್ಟು ಮೊದಲು ವಿದ್ಯಾರ್ಥಿಗಳ ಭವಿಷ್ಯವನ್ನು ಉಳಿಸಿ. ನಿಮ್ಮನ್ನು ಪ್ರಧಾನಿ ಮಾಡಿರುವುದು ಕೇವಲ ಚುನಾವಣೆ ಗೆಲ್ಲಲು ಓಟಿನ ರಾಜಕಾರಣ ಮಾಡುವುದಕ್ಕಲ್ಲ. ಅಸಮರ್ಥ ಶಿಕ್ಷಣ ಮಂತ್ರಿಯ ರಾಜೀನಾಮೆ ಪಡೆಯಿರಿ ಎಂದು ಅವರು ಆಗ್ರಹಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶೈಲೇಂದ್ರ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News