×
Ad

ಯುನಾನಿ ಮಹಾವಿದ್ಯಾಲಯದಲ್ಲಿ ಮಾಸ್ಟರ್ಸ್, ಪಿಎಚ್‍ಡಿ ಕೋರ್ಸ್ ಆರಂಭ: ಕೇಂದ್ರ ಸಚಿವ ಡಾ.ಮುನ್ಜುಪಾರ ಮಹೇಂದ್ರ ಭಾಯ್

Update: 2024-01-21 19:05 IST

ಬೆಂಗಳೂರು: ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಯುನಾನಿ ವೈದ್ಯಕೀಯ ಮಹಾವಿದ್ಯಾಲಯವು ದೇಶದ ಪ್ರತಿಷ್ಠಿತ ಸಂಸ್ಥೆಯಾಗುವ ಎಲ್ಲ ಅರ್ಹತೆಗಳನ್ನು ಹೊಂದಿದೆ. ಇಲ್ಲಿ ಮಾಸ್ಟರ್ಸ್ ಹಾಗೂ ಪಿಎಚ್ ಡಿ ಕೋರ್ಸುಗಳನ್ನು ಪ್ರಾರಂಭಿಸಲಾಗುವುದು ಎಂದು ಕೇಂದ್ರ ಆಯುಷ್ ಇಲಾಖೆಯ ರಾಜ್ಯ ಸಚಿವ ಡಾ. ಮುನ್ಜುಪಾರ ಮಹೇಂದ್ರ ಭಾಯ್ ಹೇಳಿದ್ದಾರೆ.

ರವಿವಾರ ನಗರದ ಮಾಗಡಿ ರಸ್ತೆಯ ಕೊಟ್ಟಿಗೆಪಾಳ್ಯದಲ್ಲಿರುವ ರಾಷ್ಟ್ರೀಯ ಯುನಾನಿ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿನಿಯರಿಗಾಗಿ ನಿರ್ಮಿಸಿರುವ ವಿದ್ಯಾರ್ಥಿ ನಿಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.

2014ಕ್ಕಿಂತ ಮುನ್ನ ದೇಶದಲ್ಲಿ ಆಯುರ್ವೇದ, ಯುನಾನಿ, ಸಿದ್ಧ, ಹೋಮಿಯೋಪತಿ ಚಿಕಿತ್ಸಾ ಕ್ರಮಗಳ ಬಗ್ಗೆ ಹೆಚ್ಚು ಗಮನ ಹರಿಸಿರಲಿಲ್ಲ. ಕೇಂದ್ರದಲ್ಲಿ ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರತ್ಯೇಕ ಆಯುಷ್ಇಲಾಖೆ ಆರಂಭಿಸಿ 4500 ಕೋಟಿ ರೂ.ಗಳ ಬಜೆಟ್ ಅನ್ನು ಒದಗಿಸಲಾಗಿದೆ ಎಂದು ಅವರು ಹೇಳಿದರು.

ಇದರಿಂದಾಗಿ ದೇಶದ ಹಲವೆಡೆ ಯುನಾನಿ, ಆಯುರ್ವೇದ ಕೋರ್ಸುಗಳ ಕಾಲೇಜುಗಳು ಆರಂಭವಾಗಿವೆ. ಇಲ್ಲಿನ ವಿದ್ಯಾರ್ಥಿಗಳು ಸಂಶೋಧನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮುನ್ಜುಪಾರ ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಯುನಾನಿ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿನಿಯರಿಗಾಗಿ ಸುಸಜ್ಜಿತವಾದ ವಿದ್ಯಾರ್ಥಿ ನಿಲಯ ನಿರ್ಮಿಸಿದಕ್ಕಾಗಿ ಕೇಂದ್ರ ಸರಕಾರವನ್ನು ಅಭಿನಂದಿಸಿದರು. ಅಲ್ಲದೇ, ರಾಜ್ಯ ಸರಕಾರದ ವತಿಯಿಂದಲೂ ಈ ಸಂಸ್ಥೆಗೆ ಅಗತ್ಯ ಸಹಕಾರ ನೀಡುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಯುನಾನಿ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕ ಪ್ರೋ.ಅಬ್ದುಲ್ ವದೂದ್ ಅತಿಥಿಗಳನ್ನು ಸ್ವಾಗತಿಸಿದರು. ಡಾ.ಜಮೀಲಾ ಬಾನು, ಡಾ.ಎಂ.ಎ.ಖಾಸ್ಮಿ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News