ಬೆಳೆ ವಿಮೆ ಪರಿಹಾರ ವಿತರಣೆ, ಪಾವತಿ ವ್ಯತ್ಯಾಸ ಸರಿಪಡಿಸಲು ಸಚಿವ ಮಧು ಬಂಗಾರಪ್ಪ ಸೂಚನೆ
ಬೆಂಗಳೂರು : 2025-26ನೆ ಸಾಲಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವಿಮಾ ಪರಿಹಾರ ಮೊತ್ತದ ನಿರ್ಧರಿಸುವಲ್ಲಿ ಹಾಗೂ ಪಾವತಿಸುವಲ್ಲಿ ಸಾಕಷ್ಟು ವ್ಯತ್ಯಾಸ ಕಂಡುಬಂದಿರುವ ಹಿನ್ನೆಲೆಯಲ್ಲಿ, ಈ ಪ್ರಕ್ರಿಯೆಯ ಸಮಗ್ರ ಮರು ಪರಿಶೀಲನೆ ನಡೆಸುವಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುರುವಾರ ನಗರದಲ್ಲಿರುವ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಬೆಳೆ ವಿಮೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ವಿಮಾ ಪರಿಹಾರ ನಿರ್ಧರಿಸುವಲ್ಲಿ ಹಾಗೂ ಪಾವತಿಗೆ ಸಂಬಂಧಿಸಿದಂತೆ ಈವರೆಗೆ ಕೈಗೊಂಡಿರುವ ಎಲ್ಲ ಕ್ರಮಗಳನ್ನು ಕೂಲಂಕಷವಾಗಿ ಪರಿಶೀಲಿಸಿದರು.
ಸಭೆಯಲ್ಲಿ ಹೊಸನಗರ ಮತ್ತು ತೀರ್ಥಹಳ್ಳಿ ಭಾಗದ ರೈತರ ನಿಯೋಗ ಭಾಗವಹಿಸಿ, ಬೆಳೆ ವಿಮೆ ಪರಿಹಾರ ನಿರ್ಧರಣೆ ಮತ್ತು ಪಾವತಿಯಲ್ಲಿ ತಮಗಾಗಿರುವ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದಿತು. ರೈತರ ಅಹವಾಲುಗಳನ್ನು ಆಲಿಸಿದ ಅವರು, ಸರಕಾರದ ನಿರ್ಧಾರಗಳು ಸದಾ ರೈತಪರವಾಗಿರಬೇಕು ಎಂದು ಹೇಳಿದರು.
ಕೃಷಿ, ತೋಟಗಾರಿಕೆ ಹಾಗೂ ಹವಾಮಾನ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಬಾರದು ಎಂದು ಮಧು ಬಂಗಾರಪ್ಪ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಕಾಶ್ ನಿಟ್ಟಾಲಿ ಅವರು ಆನ್‍ಲೈನ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಅಭಿಷೇಕ್, ವಿಪತ್ತು ನಿರ್ವಹಣಾ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.