ಬೆಂಗಳೂರು | ಕ್ಷುಲ್ಲಕ ಕಾರಣಕ್ಕೆ ಇಬ್ಬರು ಮಕ್ಕಳ ಹತ್ಯೆ; ಆರೋಪಿ ಪೊಲೀಸ್ ವಶಕ್ಕೆ
ಆರೋಪಿ ಖಾಸೀಂ
ಬೆಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊರ್ವ ಮಕ್ಕಳ ಮೇಲೆ ಹಲ್ಲೆ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಇಲ್ಲಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಶನಿವಾರ ಕಮ್ಮಸಂದ್ರದಲ್ಲಿ ಈ ಘಟನೆ ನಡೆದಿದ್ದು, ಖಾಸೀಂ ಎಂಬಾತ ಈ ಕೃತ್ಯವೆಸಗಿದ್ದಾನೆ. ಘಟನೆಯಲ್ಲಿ ಚಾಂದ್ ಪಾಶಾ ಎಂಬುವರ 9 ಮತ್ತು 7 ವರ್ಷ ಇಬ್ಬರು ಗಂಡು ಮಕ್ಕಳು ಮೃತಪಟ್ಟಿದ್ದಾರೆ. ಮತ್ತೋರ್ವ ಪುತ್ರನೂ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಯಾದಗಿರಿಯ ಕುರುಕುಂದ ಗ್ರಾಮದ ಚಾಂದ್ ಪಾಶಾ ಕುಟುಂಬಸ್ಥರು ಐದು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಗಾರೆ ಕೆಲಸ ಮಾಡುತ್ತಿದ್ದರು. ಆರೋಪಿ ಖಾಸೀಂ, ಚಾಂದ್ ಪಾಶಾ ಸಂಬಂಧಿ ಎನ್ನಲಾಗಿದೆ. ಶನಿವಾರ ಎಂದಿನಂತೆ ಚಾಂದ್ ಪಾಶಾ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲಿದ್ದ ಮಕ್ಕಳ ಮೇಲೆ ಖಾಸೀಂ ಗಂಭೀರ ಹಲ್ಲೆ ನಡೆಸಿದ್ದಾನೆ. ಇದರಿಂದ ಇಬ್ಬರು ಮೃತಪಟ್ಟಿದ್ದು, ಮತ್ತೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿ ಖಾಸೀಂನನ್ನು ವಶಕ್ಕೆ ಪಡೆದಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.