ಎಸ್ಐಆರ್ ಕುರಿತು ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
ಸತೀಶ್ ಜಾರಕಿಹೊಳಿ
ಬೆಂಗಳೂರು: ಎಸ್ಐಆರ್ ಕುರಿತು ಮಾಧ್ಯಮಗಳ ಮುಂದೆ ತಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಫಾರಂ–7 ಮೂಲಕ ಕಾಂಗ್ರೆಸ್ ಬೆಂಬಲಿಗ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸುವ ಬಿಜೆಪಿಯ ಷಡ್ಯಂತ್ರವನ್ನು ನಮ್ಮ ರಾಷ್ಟ್ರ ನಾಯಕರಾದ ರಾಹುಲ್ ಗಾಂಧಿ ಅವರ ಹೋರಾಟ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ವಿಫಲಗೊಳಿಸಲಾಗಿದೆ ಎಂಬುದು ತಮ್ಮ ಹೇಳಿಕೆಯ ಉದ್ದೇಶವಾಗಿತ್ತು. ಆದರೆ, ಎಸ್ಐಆರ್ ಪ್ರಕ್ರಿಯೆ ಸರಿಯಾಗಿದೆ ಎಂಬ ಅರ್ಥದಲ್ಲಿ ತಾವು ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದಲ್ಲಿ ಫಾರಂ–7 ಮೂಲಕ ಅರ್ಹ ಮತದಾರರ ಹೆಸರುಗಳನ್ನು ಅಳಿಸುವ ಪ್ರಯತ್ನವನ್ನು ನಾವು ವಿಫಲಗೊಳಿಸಿದ್ದು, ಈ ಹೋರಾಟಕ್ಕೆ ಬೆಳಗಾವಿ ಜಿಲ್ಲೆಯಿಂದಲೇ ಚಾಲನೆ ನೀಡಿ ಯಶಸ್ವಿಯಾಗಿ ಎದುರಿಸಿದ್ದೇವೆ ಎಂದು ಹೇಳಿದ್ದಾರೆ.
ಅರ್ಹ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನದ ವಿರುದ್ಧ ತಮ್ಮ ನಿಲುವು ಮೊದಲಿನಿಂದಲೂ ದೃಢವಾಗಿದೆ. ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕುವ ಪ್ರಯತ್ನಗಳನ್ನು ಬಲವಾಗಿ ವಿರೋಧಿಸುತ್ತೇನೆ. ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರೊಂದಿಗೆ ದೃಢವಾಗಿ ನಿಲ್ಲುತ್ತೇನೆ ಎಂದು ತಿಳಿಸಿದ್ದಾರೆ.
ನನ್ನ ಹೇಳಿಕೆಯ ಉದ್ದೇಶವನ್ನು ತಪ್ಪಾಗಿ ಅರ್ಥೈಸದೆ, ಅದರ ನೈಜ ಆಶಯವನ್ನು ಗ್ರಹಿಸಬೇಕೆಂದು ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ.