Mysuru | ಆನೆ ದಾಳಿಗೆ ರೈತ ಮೃತ್ಯು
ಸಾಂದರ್ಭಿಕ ಚಿತ್ರ | PC : AI
ಮೈಸೂರು : ಆನೆ ದಾಳಿಗೆ ರೈತನೋರ್ವ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಾಯಶೆಟ್ಟಿಪುರದಲ್ಲಿ ವರದಿಯಾಗಿದೆ.
ಮೃತಪಟ್ಟ ರೈತ ಕುಮಾರ್ ಎಂದು ತಿಳಿದು ಬಂದಿದೆ. ರಾತ್ರಿ ಹೊಲ ಕಾಯಲು ತೆರಳಿ ಮಂಗಳವಾರ ಬೆಳಿಗ್ಗೆ ಮನೆಗೆ ಹಿಂದಿರುಗುವ ವೇಳೆ ಆನೆ ದಾಳಿ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಘಟನಾ ಸ್ಥಳಕ್ಕೆ ತೆರಳಿ ಆರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ದರ್ಶನ್ ಧ್ರುವನಾರಾಯಣ್ ಮಂಗಳವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಮೃತ ಕುಮಾರ್ ಅವರ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದ ದುಃಖತಪ್ತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಘಟನೆಯ ವಿಷಯ ತಿಳಿದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಆನೆಯನ್ನು ಶೀಘ್ರವಾಗಿ ಸೆರೆಹಿಡಿಯಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಅರಣ್ಯ ಸಚಿವರನ್ನು ಮೃತರ ಮನೆಗೆ ಕರೆತಂದು, ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಮೃತರ ಕುಟುಂಬದ ಸದಸ್ಯರಿಗೆ ಅವರ ವಿದ್ಯಾರ್ಹತೆಗೆ ಅನುಗುಣವಾಗಿ ಉದ್ಯೋಗ ದೊರಕಿಸಿಕೊಡಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.