ದೇಶದ ಅಭಿವೃದ್ಧಿಗೆ ನೆಹರು ಹಾಕಿದ ಅಡಿಪಾಯ ಮರೆಯಲು ಸಾಧ್ಯವಿಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಸ್ವತಂತ್ರ ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರು ದೇಶದ ಅಭಿವೃದ್ಧಿಗೆ ಭದ್ರವಾದ ಅಡಿಪಾಯ ಹಾಕಿದ ಮಹಾನ್ ನಾಯಕ. ಆಹಾರ ಭದ್ರತೆ, ನೀರಾವರಿ, ಕೈಗಾರಿಕೆ, ವಿಜ್ಞಾನ, ಶಿಕ್ಷಣ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ಬಲವರ್ಧನೆಗೆ ಅವರು ನೀಡಿದ ಕೊಡುಗೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಶನಿವಾರ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನೆಹರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.
ನೆಹರು ಅವರಿಗೆ ಮಕ್ಕಳ ಬಗ್ಗೆ ಅಪಾರ ಪ್ರೀತಿ ಇತ್ತು. ಮಕ್ಕಳನ್ನು ಗಿಡಗಳಲ್ಲಿ ಅರಳುವ ಮೊಗ್ಗುಗಳಿಗೆ ಹೋಲಿಸುತ್ತಿದ್ದ ಅವರು, ಇಂದಿನ ಮಕ್ಕಳೇ ನಾಳಿನ ದೇಶದ ಭವಿಷ್ಯ ಎಂದು ನಂಬಿದ್ದರು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಬೆಳೆಸಿ, ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸಬೇಕು ಎಂಬುದು ಅವರ ಆಶಯವಾಗಿತ್ತು. ಮಕ್ಕಳಿಗಾಗಿ ಸಮಯ ಮೀಸಲಿಡುವುದು ಪ್ರತಿಯೊಬ್ಬರ ಕರ್ತವ್ಯ ಎಂಬುದನ್ನು ಅವರು ಪ್ರತಿಪಾದಿಸಿದ್ದರು ಎಂದು ಹೇಳಿದರು.
1947ರಲ್ಲಿ ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ದೇಶ ಆಹಾರದ ಕೊರತೆ, ಬಡತನ, ಕೋಮುಗಲಭೆ ಹಾಗೂ ಆರ್ಥಿಕ ಸಂಕಷ್ಟಗಳನ್ನು ಎದುರಿಸುತ್ತಿತ್ತು. ಇಂತಹ ಪರಿಸ್ಥಿತಿಯಲ್ಲಿ ಪ್ರಧಾನಮಂತ್ರಿಯಾದ ನೆಹರು ಅವರು ಪಂಚವಾರ್ಷಿಕ ಯೋಜನೆಗಳ ಮೂಲಕ ದೇಶದ ಅಭಿವೃದ್ಧಿಗೆ ಆದ್ಯತೆ ನೀಡಿದರು. ಭಾಕ್ರಾ ನಂಗಲ್, ನಾಗಾರ್ಜುನ ಸಾಗರ, ಹಿರಾಕುಡ್ ಹಾಗೂ ದಾಮೋದರ್ ಕಣಿವೆ ಯೋಜನೆಗಳಂತಹ ಬೃಹತ್ ನೀರಾವರಿ ಯೋಜನೆಗಳ ಮೂಲಕ ಕೃಷಿ ಅಭಿವೃದ್ಧಿಗೆ ಅಡಿಪಾಯ ಹಾಕಿದರು. ಬಳಿಕ ಇಂದಿರಾ ಗಾಂಧಿ ಅವರ ಆಡಳಿತದಲ್ಲಿ ಕೃಷಿ ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್ ಅವರಂತಹ ತಜ್ಞರ ಕೊಡುಗೆಯೊಂದಿಗೆ ಹಸಿರು ಕ್ರಾಂತಿ ಯಶಸ್ವಿಯಾಯಿತು ಎಂದು ವಿವರಿಸಿದರು.
ನೆಹರು ಅವರು ನೀರಾವರಿಗೆ ಮಾತ್ರ ಸೀಮಿತವಾಗದೆ ಕೈಗಾರಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಅಭಿವೃದ್ಧಿಗೂ ವಿಶೇಷ ಒತ್ತು ನೀಡಿದರು. ಸಾರ್ವಜನಿಕ ವಲಯದ ಉದ್ಯಮಗಳು, ಸಂಶೋಧನಾ ಸಂಸ್ಥೆಗಳು ಹಾಗೂ ವೈಜ್ಞಾನಿಕ ಕೇಂದ್ರಗಳ ಸ್ಥಾಪನೆಗೆ ಆದ್ಯತೆ ನೀಡಿದರು. ಸಮಾಜವಾದಿ ಚಿಂತನೆಯೊಂದಿಗೆ ಮಿಶ್ರ ಆರ್ಥಿಕ ನೀತಿಯನ್ನು ಪ್ರತಿಪಾದಿಸಿ, ದೇಶದ ಆರ್ಥಿಕ ಸ್ವಾವಲಂಬನೆಗೆ ಶ್ರಮಿಸಿದರು. ಇಂದು ಕಾಣುತ್ತಿರುವ ಆಧುನಿಕ ಭಾರತದ ಪ್ರಗತಿಯ ಹಿಂದೆ ಅವರ ದೂರದೃಷ್ಟಿಯ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದರು.
ಶ್ರೀಮಂತ ಕುಟುಂಬದಲ್ಲಿ ಜನಿಸಿದರೂ ನೆಹರು ಅವರು ಐಷಾರಾಮಿ ಜೀವನವನ್ನು ತ್ಯಜಿಸಿ ಮಹಾತ್ಮ ಗಾಂಧೀಜಿ ಅವರೊಂದಿಗೆ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರು. ಸುಮಾರು ಒಂಬತ್ತು ವರ್ಷಗಳ ಕಾಲ ಜೈಲು ವಾಸ ಅನುಭವಿಸಿದ ಅವರು, ಸೆರೆವಾಸದ ಸಂದರ್ಭದಲ್ಲಿಯೂ ಮಹತ್ವದ ಸಾಹಿತ್ಯ ಕೃತಿಗಳನ್ನು ರಚಿಸಿದರು. ಸತತ ಸುಮಾರು 17 ವರ್ಷಗಳ ಕಾಲ ಪ್ರಧಾನಮಂತ್ರಿಯಾಗಿ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಿದರು ಎಂದು ಸ್ಮರಿಸಿದರು.
ನೆಹರು ಅವರು ಪ್ರಜಾಪ್ರಭುತ್ವ, ಜಾತ್ಯತೀತತೆ, ಬಹುತ್ವ ಮತ್ತು ಸಮಾನತೆಯ ಮೌಲ್ಯಗಳಲ್ಲಿ ನಂಬಿಕೆ ಹೊಂದಿದ್ದರು. ಆದರೆ ಬಿಜೆಪಿಯ ರಾಜಕೀಯ ಸಿದ್ಧಾಂತವು ಈ ಚಿಂತನೆಗಳಿಗೆ ವಿರುದ್ಧವಾಗಿದೆ. ಅದಕ್ಕಾಗಿಯೇ ಬಿಜೆಪಿ ನಾಯಕರು ನೆಹರು ಅವರ ವ್ಯಕ್ತಿತ್ವ ಮತ್ತು ಸಾಧನೆಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿದ್ದಾರೆ. ನೆಹರು ಅವರನ್ನು ವಿರೋಧಿಸುವ ಉದ್ದೇಶದಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ದೇಶದಲ್ಲಿ ಇಂದಿಗೂ ಜಾತೀಯತೆ, ಬಡತನ ಮತ್ತು ಸಾಮಾಜಿಕ ಅಸಮಾನತೆ ಮುಂದುವರಿದಿವೆ. ಇವುಗಳನ್ನು ಹೋಗಲಾಡಿಸದೆ ಸಮಸಮಾಜ ನಿರ್ಮಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬರೂ ಮಾನವೀಯತೆ, ಪರಸ್ಪರ ಪ್ರೀತಿ, ಜಾತ್ಯತೀತ ಮನೋಭಾವ ಮತ್ತು ವೈಜ್ಞಾನಿಕ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕು. ವಿಶೇಷವಾಗಿ ಮಕ್ಕಳು ಮತ್ತು ಯುವಜನರು ಈ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ನೆಹರು ಅವರ ಜನ್ಮದಿನವನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳನ್ನು ರಕ್ಷಿಸುವುದರ ಜೊತೆಗೆ ಜಾತೀಯತೆ ಹಾಗೂ ಅಸಮಾನತೆಯನ್ನು ಹೋಗಲಾಡಿಸಿ, ಸುಭದ್ರ, ಸಮೃದ್ಧ ಮತ್ತು ಸಮಾನತೆಯ ಭಾರತವನ್ನು ನಿರ್ಮಿಸುವುದೇ ನೆಹರು ಅವರಿಗೆ ಸಲ್ಲಿಸುವ ನಿಜವಾದ ಗೌರವವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.