×
Ad

ಸಂಸದ ಡಿ.ಕೆ.ಸುರೇಶ್ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ: ಹಲವರು ವಶಕ್ಕೆ

Update: 2024-02-04 22:56 IST

ಬೆಂಗಳೂರು: ‘ಪ್ರತ್ಯೇಕ ರಾಷ್ಟ್ರದ ಬೇಡಿಕೆ’ ಪ್ರಸ್ತಾವ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿ ಹಲವರನ್ನು ವಶಕ್ಕೆ ಪಡೆದರು.

ರವಿವಾರ ಬೆಳಗ್ಗೆ ಇಲ್ಲಿನ ಸದಾಶಿವನಗರದಲ್ಲಿರುವ ಡಿ.ಕೆ.ಸುರೇಶ್ ನಿವಾಸದ ಬಳಿ ಜಮಾಯಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಸುರೇಶ್ ಮನೆಗೆ ಮುತ್ತಿಗೆ ಹಾಕಲು ಮುಂದಾದ ವೇಳೆ ಪೊಲೀಸರು ತಡೆದರು. ಆದರೂ, ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ಪೊಲೀಸ್ ವಾಹನದಲ್ಲಿ ಕರೆದೊಯ್ದರು.

ಕೇಂದ್ರ ಬಜೆಟ್ ಮಂಡನೆಯ ಬಳಿಕ ಡಿ.ಕೆ.ಸುರೇಶ್ ಅವರು ‘ದಕ್ಷಿಣ ಭಾರತಕ್ಕೆ ಪ್ರತ್ಯೇಕ ದೇಶದ ಬಗ್ಗೆ ಪ್ರಸ್ತಾವ ಮಂಡಿಸಿದ್ದು, ಇದು ಆಕ್ಷೇಪಾರ್ಹ. ಇದನ್ನು ಖಂಡಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಯುವ ಮೋರ್ಚಾ ಮುಖಂಡರು ತಿಳಿಸಿದರು.

ಇನ್ನೂ, ಲಾಠಿ ಏಟು ಕ್ರಮವನ್ನು ಖಂಡಿಸಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಪ್ರತಿಭಟನಾನಿರತ ಕಾರ್ಯಕರ್ತರ ಮೇಲೆ ಪೊಲೀಸರ ತೀವ್ರ ಹಲ್ಲೆಯನ್ನು ಬಿಜೆಪಿ ಖಂಡಿಸಿದೆ. ಶಾಂತಿಯುವ ಪ್ರತಿಭಟನೆ ಮಾಡಲು ಹೋದವರ ಮೇಲೆ ಲಾಠಿಚಾರ್ಜ್ ಮಾಡಿದ್ದಲ್ಲದೆ ಪೊಲೀಸರು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂದು ದೂರಿದರು.

ಏನಿದು ಹೇಳಿಕೆ?: ಫೆ.1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ ಬಳಿಕ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಅದಕ್ಕೆ ಪ್ರತಿಕ್ರಿಯಿಸುವ ಸಂದರ್ಭದಲ್ಲಿ ಸಂಸದ ಡಿ.ಕೆ.ಸುರೇಶ್, ‘ಕೇಂದ್ರದಿಂದ ನಿರಂತರವಾಗಿ ಅನ್ಯಾಯವಾಗುತ್ತಿದೆ. ಇದರಿಂದಾಗಿ ಒಕ್ಕೂಟ ವ್ಯವಸ್ಥೆಯ ಮೇಲೆ ನಂಬಿಕೆ ಕುಸಿಯಲಿದೆ. ದಕ್ಷಿಣ ಭಾರತದ ರಾಜ್ಯಗಳು ಪ್ರತ್ಯೇಕತೆಯ ಒತ್ತಾಯ ಮಾಡುವ ಪರಿಸ್ಥಿತಿ ಬರಬಹುದು’ ಎಂದು ದೂರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News