ಕೇಂದ್ರ ಸಚಿವ ಕುಮಾರಸ್ವಾಮಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಈ ಹಿಂದೆ ಸಿಎಂ ಆಗಿದ್ದ ಅವಧಿಯಲ್ಲಿ ಡಿನೋಟಿಫಿಕೇಶನ್ ಹಾಗೂ ಅಕ್ರಮ ಗಣಿಗಾರಿಕೆಗೆ ಅನುಮತಿ ನೀಡಿರುವ ಪ್ರಕರಣಗಳಲ್ಲಿ ಅವರ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿ, ತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಕುಮಾರಸ್ವಾಮಿ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಆಗ್ರಹಿಸಿದ್ದಾರೆ.
ಗುರುವಾರ ರೇಸ್‍ಕೋರ್ಸ್ ರಸ್ತೆಯಲ್ಲಿ ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶ್ರೀಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪೆನಿಗೆ ಕಾನೂನು ಬಾಹಿರವಾಗಿ ಗಣಿಗಾರಿಕೆಗೆ ಅವಕಾಶ ನೀಡಿರುವ ಬಗ್ಗೆ ಲೋಕಾಯುಕ್ತರು ತನಿಖೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಬಿಡಿಎ ವ್ಯಾಪ್ತಿಗೆ ಬರುವ ಹಲಗೆ ವಡೇರಹಳ್ಳಿ ಡಿನೋಟಿಫಿಕೇಶನ್ ಪ್ರಕರಣ ಮತ್ತು ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲೂ ಭೂ ಒತ್ತುವರಿ ಪ್ರಕರಣದಲ್ಲಿ ಕುಮಾರಸ್ವಾಮಿ ಸಿಲುಕಿಕೊಂಡಿದ್ದಾರೆ ಎಂದು ತಿಳಿಸಿದರು.
ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದ್ದಾರೆ. ಬಿಜೆಪಿ ನಾಯಕರು ಮೂಡ ಪ್ರಕರಣದಲ್ಲಿ ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ಮಾಡಿದ್ದರು. ಈಗ ಮಂಡ್ಯದಿಂದ ರಾಜಭವನದವರೆಗೂ ಪಾದಯಾತ್ರೆ ನಡೆಸಿ ಕುಮಾರಸ್ವಾಮಿ ರಾಜೀನಾಮೆಗೆ ಒತ್ತಾಯಪಡಿಸಬೇಕು. ಭ್ರಷ್ಟಾಚಾರದ ವಿರುದ್ಧ ಕಿಂಚೆತ್ತಾದರೂ ಹೋರಾಟದ ಮನೋಭಾವ ಇದ್ದರೆ ಹಾಗೂ ಭ್ರಷ್ಟಾಚಾರವನ್ನು ಟೀಕಿಸುವ ನೈತಿಕತೆ ಹೊಂದಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯಪಾಲರಿಗೆ ಮನವಿ ಸಲ್ಲಿಸಬೇಕು ಎಂದು ಅವರು ತಿಳಿಸಿದರು.
ರಾಜ್ಯಪಾಲರು ಈ ಪ್ರಕರಣಗಳನ್ನು ಅತ್ಯಂತ ಜರೂರಾಗಿ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ ಸೂಚಿಸಬೇಕು ಹಾಗೂ ಈ ಭ್ರಷ್ಟಾಚಾರದ ಪ್ರಕರಣದಲ್ಲಿ ತುರ್ತು ತನಿಖೆಗೆ ಸೂಚನೆ ನೀಡಬೇಕು ಎಂದು ಮನೋಹರ್ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಎ.ಆನಂದ್, ಹೇಮರಾಜು, ಕುಶಾಲ್ ಹರುವೇಗೌಡ, ಸುಂಕದಕಟ್ಟೆ ನವೀನ್ ಸೇರಿದಂತೆ ಹಲವರು ಭಾಗವಹಿಸಿದ್ದರು.