×
Ad

ಕನ್ನಡದ ಆದೇಶ ಪಾಲಿಸದ ಸಾಬೂನು-ಮಾರ್ಜಕ ನಿಯಮಿತದ ವಿರುದ್ಧ ಕ್ರಮವಹಿಸಿ : ಡಾ.ಪುರುಷೋತ್ತಮ ಬಿಳಿಮಲೆ

Update: 2025-04-21 18:53 IST

ಡಾ.ಪುರುಷೋತ್ತಮ ಬಿಳಿಮಲೆ

ಬೆಂಗಳೂರು : ರಾಜ್ಯದಲ್ಲಿ ತಯಾರಾಗುವ ಎಲ್ಲ ಉತ್ಪನ್ನಗಳ ಮೇಲೆ ಹೆಸರು ಮತ್ತು ಅವುಗಳ ಬಳಕೆಯ ನಿರ್ದೇಶನಗಳನ್ನು ಕನ್ನಡದಲ್ಲಿಯೂ ಮುದ್ರಿಸುವಂತೆ ಕೈಗಾರಿಕಾ ಇಲಾಖೆ ಹೊರಡಿಸಿರುವ ಆದೇಶಕ್ಕೆ ಕಿಮ್ಮತ್ತು ನೀಡದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ವಿರುದ್ಧ ಕಠಿಣ ಕ್ರಮವಹಿಸಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.

ಈ ಕುರಿತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರಿಗೆ ಪತ್ರ ಬರೆದಿರುವ ಅವರು, ಕೈಗಾರಿಕಾ ಇಲಾಖೆ ಹೊರಡಿಸಿರುವ ಆದೇಶಕ್ಕೆ ಇದೇ ಇಲಾಖೆಯ ಅಧೀನದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು ಯಾವುದೇ ಕಿಮ್ಮತ್ತನ್ನು ನೀಡದಿರುವುದು ವಿಷಾದನೀಯ. ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಉತ್ಪಾದಿಸುವ ಮೈಸೂರು ಸ್ಯಾಂಡಲ್ ಸಾಬೂನು ಕನ್ನಡಿಗರ ಹೆಮ್ಮೆಯ ಪ್ರತೀಕವಾಗಿದ್ದು, ಇದು ದೇಶ-ವಿದೇಶಗಳನ್ನು ತಲುಪುವ ಮಾದರಿಯಲ್ಲಿ ಕನ್ನಡಿಗರ ಮನೆಮನಗಳನ್ನು ತಲುಪಿದೆ. ಆದರೆ ಈ ಸಂಸ್ಥೆಯು ತನ್ನ ಯಾವುದೇ ಉತ್ಪನ್ನಗಳ ಮೇಲೆ ಕನ್ನಡಕ್ಕೆ ಆದ್ಯತೆಯನ್ನು ನೀಡದಿರುವುದು ಆಕ್ಷೇಪಾರ್ಹವಾಗಿದೆ ಎಂದು ತಿಳಿಸಿದ್ದಾರೆ.

ಕೈಗಾರಿಕಾ ಇಲಾಖೆಯೇ ಹೊರಡಿಸಿರುವ ಆದೇಶವನ್ನು ಉಲ್ಲಂಘಿಸುವ ಮೂಲಕ ನೆಲದ ಕಾನೂನನ್ನು ಅಗೌರವಿಸಿದೆ. ಹಲವು ಕನ್ನಡ ಪರ ಸಂಘಟನೆಗಳು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಈ ಕನ್ನಡ ವಿರೋಧಿ ಧೋರಣೆಯನ್ನು ಖಂಡಿಸಿ ಪ್ರಾಧಿಕಾರಕ್ಕೆ ಮನವಿಗಳನ್ನು ಸಲ್ಲಿಸಿದ್ದು, ಈ ಬಗ್ಗೆ ಸುದೀರ್ಘವಾದ ಚರ್ಚೆಗಳನ್ನು ನಡೆಸಿ ಈ ಪತ್ರ ಬರೆಯಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಂಸ್ಥೆಯ ಎಲ್ಲ ಉತ್ಪನ್ನಗಳ ಮೇಲೆ ಕನ್ನಡಕ್ಕೆ ಮೊದಲ ಪ್ರಾಶಸ್ತ್ಯ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವ ಮೂಲಕ ಸರಕಾರದ ಕುರಿತಾದ ಕನ್ನಡಿಗರ ವಿಶ್ವಾಸವನ್ನು ಮರುಸ್ಥಾಪಿಸುವ ಕಾರ್ಯವಾಗಬೇಕು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News