ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ಅಡ್ಡಿ; ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸುವಂತೆ ದಲಿತ ಹಕ್ಕುಗಳ ಸಮಿತಿ ಆಗ್ರಹ
ಬೆಂಗಳೂರು : ತುಮಕೂರು ಜಿಲ್ಲೆ ಮಧುಗಿರಿ ತಾಲೂಕು, ಕವಣದಲ ಗ್ರಾಮದಲ್ಲಿ ದಲಿತರು ದೇವಸ್ಥಾನ ಪ್ರವೇಶಿಸಲು ತೆರಳಿದ ವೇಳೆ ಮೇಲ್ಜಾತಿಯವರು ಅಡ್ಡಿಪಡಿಸಿ, ದೌರ್ಜನ್ಯವೆಸಗಿದ್ದಾರೆ. ಈ ಸಂಬಂಧ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸಬೇಕು ಎಂದು ಕರ್ನಾಟಕ ದಲಿತ ಹಕ್ಕುಗಳ ಸಮಿತಿ ಆಗ್ರಹಿಸಿದೆ.
ಮಂಗಳವಾರ ಈ ಸಂಬಂಧ ಪ್ರಕಟನೆ ನೀಡಿರುವ ಸಮಿತಿ ಪ್ರಧಾನ ಕಾರ್ಯದರ್ಶಿ ಎನ್.ರಾಜಣ್ಣ, ಸಂಚಾಲಕ ಗೋಪಾಲಕೃಷ್ಣ ಹರಳಹಳ್ಳಿ, ದಲಿತರು ದೇವಸ್ಥಾನ ಪ್ರವೇಶ ಮಾಡಿದರೆ ಮೈಲಿಗೆ ಆಗುತ್ತದೆ ಎಂದು ಅಸ್ಪೃಶ್ಯತೆ, ಜಾತಿ ತಾರತಮ್ಯ ಮಾಡಿ ದಲಿತರನ್ನು ಹೀಯಾಳಿಸಿ ಅವಮಾನ ಮಾಡಿದ್ದಾರೆ. ಸಂವಿಧಾನದ ಹಕ್ಕುಗಳನ್ನು ಧಿಕ್ಕರಿಸುವವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.
ದಲಿತರ ಮೇಲೆ ದೌರ್ಜನ್ಯ ನಡೆಸಿರುವ ಮೇಲ್ಜಾತಿಯವರೊಂದಿಗೆ ರಾಜಿ-ಸಂಧಾನಗಳ ಮೂಲಕ ದೌರ್ಜನ್ಯ ತಡೆಯಲು ಸಾಧ್ಯವಾಗುವುದಿಲ್ಲ. ಗೃಹಮಂತ್ರಿ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆಯಲ್ಲಿ ಇಡೀ ದೇಶವೇ ತಲೆತಗ್ಗಿಸುವ ಕೃತ್ಯ ನಡೆದಿದೆ. ತಕ್ಷಣವೇ ಆರೋಪಿಗಳನ್ನು ಬಂಧಿಸಿ, ಕಾನೂನು ರೀತಿಯಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.