×
Ad

ಮಾಜಿ ಪ್ರಧಾನಿ ದೇವೇಗೌಡರಿಗೆ ಜನ್ಮದಿನದ ಸಂಭ್ರಮ | ಸಿಎಂ ಸಹಿತ ಗಣ್ಯರ ಶುಭ ಹಾರೈಕೆ

Update: 2025-05-18 18:04 IST

ಬೆಂಗಳೂರು : ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಎಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.

ರವಿವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ನಾಡಿನ ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿಗಳು ಆದ ಎಚ್.ಡಿ.ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ಮತ್ತಷ್ಟು ಕಾಲ ತಮಗೆ ಉತ್ತಮ ಆರೋಗ್ಯ ಮತ್ತು ಆಯಸ್ಸನ್ನು ದೇವರು ಕರುಣಿಸಲೆಂದು ಹಾರೈಸುತ್ತೇನೆ’ ಎಂದು ಉಲ್ಲೇಖಿಸಿದ್ದಾರೆ.

ಪ್ರತಿಪಕ್ಷ ನಾಯಕ ಆರ್.ಅಶೋಕ್, ‘ದೇವೇಗೌಡರು ತಮ್ಮ ಸುಧೀರ್ಘ ರಾಜಕೀಯ ಅನುಭವ ಹಾಗೂ ಹೋರಾಟಗಳು, ಕ್ರಿಯಾಶೀಲತೆ ಎಲ್ಲರಿಗೂ ಮಾದರಿಯಾಗಿದೆ. ಭಗವಂತನು ತಮಗೆ ಉತ್ತಮ ಆಯುರಾರೋಗ್ಯ ಕರುಣಿಸಿ, ನಾಡಿನ ಅಭಿವೃದ್ಧಿಗೆ ಅತ್ಯಮೂಲ್ಯ ಮಾರ್ಗದರ್ಶನ ನೀಡುತ್ತಿರುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ‘ದೇವೇಗೌಡ ಅವರಿಗೆ 92ನೇ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಅವರ ದೀರ್ಘ ಸಾರ್ವಜನಿಕ ಸೇವೆಯಿಂದ ರೂಪುಗೊಂಡ ಅವರ ಅಪ್ರತಿಮ ಬುದ್ಧಿವಂತಿಕೆ ಮತ್ತು ಆಳವಾದ ದೃಷ್ಟಿಕೋನವನ್ನು ನಾವೆಲ್ಲರೂ ಗೌರವಿಸುತ್ತೇವೆ’ ಎಂದು ಹೇಳಿದ್ದಾರೆ.

‘ನನ್ನ ಶಕ್ತಿ, ನನ್ನ ಧೈರ್ಯ, ನನ್ನ ಸ್ಫೂರ್ತಿ ನನ್ನ ತಂದೆಯವರೇ ಆಗಿದ್ದಾರೆ. ಅವರ ಸಂಘರ್ಷದ ಹಾದಿ, ಸಾಧನೆ, ಸೇವಾ ತತ್ಪರತೆ ನನ್ನ ಮೇಲೆ ಅಗಾಧ ಪ್ರಭಾವ ಬೀರಿದೆ. ಇಡೀ ಬದುಕನ್ನು ರಾಷ್ಟ್ರಸೇವೆಗೆ ಸಮರ್ಪಿಸಿರುವ ಈ ಮಹಾನ್ ನಾಯಕನ ಕುಡಿಯಾಗಿ ಹುಟ್ಟಿರುವುದು ನನ್ನ ಸುಕೃತ. ಆ ಭಗವಂತ ನನ್ನ ತಂದೆಯವರಿಗೆ ಇನ್ನೂ ಹೆಚ್ಚಿನ ಆಯುರಾಗ್ಯ ಕರುಣಿಸಲಿ. ಸುದೀರ್ಘ ಕಾಲ ನಮಗೆಲ್ಲಾ ಮಾರ್ಗದರ್ಶನ ಮಾಡಿ, ಜನಸೇವೆ ಮಾಡುವ ಚೈತನ್ಯ ನೀಡಲಿ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.

ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ದೇವೇಗೌಡರು ತಮ್ಮ ಸುಧೀರ್ಘ ರಾಜಕೀಯ ಅನುಭವ ಹಾಗೂ ಹೋರಾಟಗಳು ನಾಡಿನ ಹಾಗೂ ದೇಶದ ಇತಿಹಾಸದಲ್ಲಿ ಮಹತ್ವದ ಹೆಜ್ಜೆ ಗುರುತುಗಳು, ವಯಸ್ಸು ಲೆಕ್ಕಿಸದ ರಾಜಕೀಯ ಕ್ರಿಯಾಶೀಲತೆ ಭವಿಷ್ಯದ ರಾಜಕಾರಣಿಗಳಿಗೆ ಸ್ಫೂರ್ತಿಯ ಸೆಲೆಯಾಗಿದೆ. ಗ್ರಾಮೀಣ ಜನರ ಬಗೆಗಿನ ನೈಜ ಕಾಳಜಿಯ ಕೊಡುಗೆಗಳು ಮಣ್ಣಿನ ಮಕ್ಕಳ ಪಾಲಿಗೆ ಚೈತನ್ಯ ತುಂಬಿದ ಸಮೃದ್ಧತೆಯ ಸಂಕೇತಗಳು’ ಎಂದು ತಿಳಿಸಿದ್ದಾರೆ.

‘ನಾಡಿನ ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನು ತಮಗೆ ಉತ್ತಮ ಆಯುರಾರೋಗ್ಯ ನೀಡಿ ಕಾಪಾಡಲಿ ಎಂದು ಶುಭ ಹಾರೈಸುತ್ತೇನೆ’

-ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿ

‘ಹಿರಿಯ ರಾಜಕೀಯ ಧುರೀಣ, ಮುತ್ಸದ್ಧಿ ನೇತಾರ, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಆಶೀರ್ವಾದ ಸದಾ ತಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ’

-ಬಿ.ಎಸ್.ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News