ಬಿಜೆಪಿ ಆಡಳಿತದಲ್ಲಿ ದುರ್ಘಟನೆಯ ಹೊಣೆ ಹೊತ್ತು ಆ ಪಕ್ಷದ ನಾಯಕರು ರಾಜೀನಾಮೆ ನೀಡಿದ್ದಾರೆಯೇ?: ಎಂ.ಲಕ್ಷ್ಮಣ್
ಬೆಂಗಳೂರು : ದೇಶದಲ್ಲಿ 11 ವರ್ಷದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಆಡಳಿತದಲ್ಲಿ ನಡೆದಿರುವ ದುರ್ಘಟನೆಗಳಿಂದ ಸಾವಿರಾರು ಮಂದಿ ಮೃತಪಟ್ಟಿದ್ದಾರೆ. ಯಾವುದಾದರೊಂದು ಘಟನೆಯ ಹೊಣೆ ಹೊತ್ತು ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರೆಯೇ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಪ್ರಶ್ನಿಸಿದ್ದಾರೆ.
ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ಬೆಂಗಳೂರು ನಗರದಲ್ಲಿ ನಡೆದಿರುವ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ರಾಜೀನಾಮೆ ಕೇಳುತ್ತಿದ್ದಾರೆ. ದೇಶದಲ್ಲಿ ಭಯೋತ್ಪಾದಕರು ನುಸುಳಿ ಬಂದು ಮುಗ್ಧ ಭಾರತೀಯರನ್ನು ಕೊಂದ ಸಂದರ್ಭದಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ಸಾಂತ್ವನ ಹೇಳದೆ, ಚುನಾವಣಾ ಪ್ರಚಾರಕ್ಕಾಗಿ ಬಿಹಾರಕ್ಕೆ ತೆರಳಿದ್ದರು ಎಂದು ಹೇಳಿದರು.
ಕರ್ನಾಟಕ ರಾಜ್ಯದಲ್ಲಿ ಜನಪರ ಆಡಳಿತವಿರುವ ಕಾಂಗ್ರೆಸ್ ಸರಕಾರದ ಯೋಜನೆಗಳನ್ನು ಸಹಿಸದ ಬಿಜೆಪಿಯ ಭ್ರಷ್ಟರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ
ಮೊದಲು ಪ್ರಧಾನಿ ನರೇಂದ್ರ ಮೋದಿ ಅವರ ರಾಜೀನಾಮೆ ಕೇಳಿ ಜತೆಗೆ ರಾಜ್ಯ ಬಿಜೆಪಿ ನಾಯಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ರಾಜ್ಯ ಶಾಂತಿಯುತವಾಗಿ ಅಭಿವೃದ್ಧಿಯತ್ತ ಸಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್, ಕಾಂಗ್ರೆಸ್ ಮುಖಂಡರಾದ ಎ.ಆನಂದ್ ಎಂ.ಎ.ಸಲೀಂ, ಕುಶಾಲ್ ಹರುವೇಗೌಡ, ಪುಟ್ಟರಾಜು, ಆನಂದ್ ಕುಮಾರ್, ನವೀನ್ ಸಾಯಿ, ಓಬಳೇಶ್ ಮತ್ತಿತರರು ಉಪಸ್ಥಿತರಿದ್ದರು.