×
Ad

‘ಗ್ರಾಮೀಣ ಪತ್ರಕರ್ತರ ಬಸ್ ಪಾಸ್’ ದಶಕಗಳ ಕನಸು ನನಸು: ತಗಡೂರು

Update: 2025-06-30 22:36 IST

ಬೆಂಗಳೂರು : ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜು.1ರಂದು ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ಆ ಮೂಲಕ ಮೂರು ದಶಕಗಳ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಕನಸು ನನಸಾಗಲಿದೆ. ಗ್ರಾಮೀಣ ಪತ್ರಕರ್ತರಿಗೂ ಉಚಿತವಾಗಿ ಬಸ್ ಪಾಸ್ ನೀಡಬೇಕು ಎನ್ನುವ ನಿಟ್ಟಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ) ಸತತ ನಡೆಸಿದ ಹೋರಾಟದ ಫಲವಾಗಿ ಈ ಯೋಜನೆ ಜಾರಿಗೆ ಬರುತ್ತಿದೆ ಎಂದು ತಿಳಿಸಲಾಗಿದೆ.

ದಾವಣಗೆರೆಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 38ನೆ ಪತ್ರಕರ್ತರ ಸಮ್ಮೇಳನದಲ್ಲಿ ಬಸ್ ಪಾಸ್ ನೀಡಬೇಕೆಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆ ಹಕ್ಕೋತ್ತಾಯ ಮಂಡಿಸಿದ್ದರು. ವೇದಿಕೆಯಲ್ಲಿಯೇ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಸಿಎಂ ಮನವೊಲಿಕೆ ಮಾಡಿದರು. ಕೂಡಲೇ ಅದಕ್ಕೆ ಸ್ಪಂದಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಉಚಿತ ಬಸ್ ಪಾಸ್ ಕೊಟ್ಟೇ ಕೊಡುತ್ತೇವೆ ಎಂದು ಭರವಸೆ ನೀಡಿದ್ದರು.

ಈ ಯೋಜನೆ ಜಾರಿ ಹಿಂದೆ ತೆರೆ ಮರೆಯ ಶಕ್ತಿಯಾಗಿ ಸಂಘಟನೆ ಮತ್ತು ಸರಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡಿದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್, ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕೃತಜ್ಞತೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News