ಅಶ್ಲೀಲ ಸಂದೇಶ | 'ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ' ರಮ್ಯಾರಿಗೆ ಶಿವರಾಜ್ ಕುಮಾರ್- ಗೀತಾ ದಂಪತಿ ಬೆಂಬಲ
ಬೆಂಗಳೂರು: ಮಾಜಿ ಸಂಸದೆ, ನಟಿ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡು ತನಗೆ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಕಳುಹಿಸುತ್ತಿರುವುದನ್ನು ಹಿರಿಯ ನಟ ಶಿವರಾಜಕುಮಾರ್ ಮತ್ತು ಅವರ ಪತ್ನಿ ಗೀತಾ ಶಿವರಾಜಕುಮಾರ್ ಖಂಡಿಸಿದ್ದಾರೆ. ಅಲ್ಲದೇ, ನಿಮ್ಮ ನಿಲುವು ಸರಿಯಿದೆ, ರಮ್ಯಾ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ ಎಂದೂ ಬೆಂಬಲ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.
'ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಆ ರೀತಿ ಮಾತನಾಡುವುದು ಸರಿಯಲ್ಲ; ಅದನ್ನು ನಾವು ಸಹಿಸಬಾರದು. ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ' ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ಸಾಮಾಜಿಕ ಜಾಲತಾಣ ತುಂಬಾ ಬಲಿಷ್ಠವಾದ ಅಸ್ತ್ರ, ಅದನ್ನು ತಮ್ಮ ಏಳಿಗೆಗಾಗಿ ಬಳಸಬೇಕೇ ಹೊರತು, ಅವಾಚ್ಯ ಶಬ್ದಗಳಿಂದ ನಿಂದಿಸಿ, ದ್ವೇಷ- ಅಸೂಯೆಯನ್ನು ಬಿತ್ತಲು ಬಳಸಬಾರದು ಎಂದಿದ್ದಾರೆ.
ನಿಮ್ಮ ನಿಲುವು ಸರಿಯಿದೆ, ರಮ್ಯಾ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ ಎಂದೂ ಬೆಂಬಲ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡು ತನಗೆ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಕಳುಹಿಸಿದ್ದಲ್ಲದೆ, ಕೊಲೆ ಬೆದರಿಕೆ ಹಾಕಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ನಟಿ ರಮ್ಯಾ ಸೋಮವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ ದೂರು ನೀಡಿದ್ದಾರೆ.