ಕಸ್ತೂರಿ ರಂಗನ್ ವರದಿಯ ಶಿಫಾರಸುಗಳನ್ನು ತಿರಸ್ಕರಿಸಲು ಕೇಂದ್ರ ಸರಕಾರಕ್ಕೆ ಆಕ್ಷೇಪಣೆ ಸಲ್ಲಿಕೆ : ಸಚಿವ ರಾಮಲಿಂಗಾರೆಡ್ಡಿ

Update: 2026-08-20 18:43 IST

ರಾಮಲಿಂಗಾರೆಡ್ಡಿ

ಬೆಂಗಳೂರು : ಪಶ್ಚಿಮ ಘಟ್ಟಗಳ ಅರಣ್ಯ ಮತ್ತು ಪರಿಸರ ಸಂರಕ್ಷಣೆ ಸಂಬಂಧದ ಕಸ್ತೂರಿ ರಂಗನ್ ಸಮಿತಿಯ ವರದಿಯ ಶಿಫಾರಸುಗಳನ್ನು ತಿರಸ್ಕರಿಸಬೇಕು ಹಾಗೂ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಗೆ ಹೊರಡಿಸಿರುವ ಕರಡು ಅಧಿಸೂಚನೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರಕಾರಕ್ಕೆ ಆಕ್ಷೇಪಣೆ ಸಲ್ಲಿಸಲಾಗುವುದು ಎಂದು ರಾಜ್ಯ ಸರಕಾರ ತಿಳಿಸಿದೆ.

ಗುರುವಾರ ವಿಧಾನಸಭೆಯಲ್ಲಿ ಮಲೆನಾಡು ಭಾಗದ ಸದಸ್ಯರಾದ ಟಿ.ಡಿ.ರಾಜೇಗೌಡ, ಆರಗ ಜ್ಞಾನೇಂದ್ರ ನಿಯಮ 73ರ ಅಡಿ ನೀಡಿದ ಗಮನ ಸೆಳೆಯುವ ಸೂಚನೆಗೆ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಲಿಖಿತ ಉತ್ತರ ನೀಡಿದ್ದಾರೆ.

ಪಶ್ಚಿಮ ಘಟ್ಟಗಳ ಸಂರಕ್ಷಣೆಯ ಉದ್ದೇಶದಿಂದ ರಚಿಸಲಾಗಿದ್ದ ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯಪಡೆಯು 2013ರಲ್ಲಿ ವರದಿ ಸಲ್ಲಿಸಿತ್ತು. ವರದಿಯಲ್ಲಿ ಆರು ರಾಜ್ಯಗಳ ಒಟ್ಟು 56ಸಾವಿರ ಚದರ ಕಿ.ಮೀ.ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಲು ಶಿಫಾರಸು ಮಾಡಲಾಗಿತ್ತು. ಕರ್ನಾಟಕದಲ್ಲಿ ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳ 39 ತಾಲೂಕುಗಳ 1,449 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲು ಶಿಫಾರಸು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂಬಂಧ ಕೇಂದ್ರ ಈ ಹಿಂದೆ ಆರು ಕರಡು ಅಧಿಸೂಚನೆಗಳನ್ನು ಹೊರಡಿಸಿತ್ತು. ಅವುಗಳ ಅವಧಿ ಮುಗಿದಿದ್ದು, ಏಳನೇ ಕರಡು ಅಧಿಸೂಚನೆಯನ್ನು ಜುಲೈ 27ರಂದು ಹೊರಡಿಸಲಾಗಿದೆ. ಹಿಂದಿನ ಕರಡು ಅಧಿಸೂಚನೆಗಳನ್ವಯ ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾದ ಸ್ಥಳಗಳಲ್ಲಿ ಕೆಲ ಚಟುವಟಿಕೆಗಳನ್ನು ಹೊರತುಪಡಿಸಿ ನೆಡುತೋಪು ನಿರ್ಮಾಣ, ಕೃಷಿ ಚಟುವಟಿಕೆ ಸೇರಿ ಸಾಮಾನ್ಯ ಚಟುವಟಿಕೆಗಳ ಮೇಲೆ ನಿಷೇಧವಿಲ್ಲ. ಜನರ ದೈನಂದಿನ ಚಟುವಟಿಕೆಗಳು ಹಾಗೂ ಜೀವನೋಪಾಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹೀಗಾಗಿ ಜನರನ್ನು ಒಕ್ಕಲೆಬ್ಬಿಸುವಂತಹ ಸ್ಥಿತಿ ಉದ್ಭವಿಸುವುದಿಲ್ಲ ಎಂದು ರಾಮಲಿಂಗಾರೆಡ್ಡಿ ಭರವಸೆ ನೀಡಿದರು.

ಕಸ್ತೂರಿ ರಂಗನ್ ಸಮಿತಿ ರಾಜ್ಯದಲ್ಲಿ 20,668 ಚದರ ಕಿಲೋ ಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಲು ಶಿಫಾರಸು ಮಾಡಿದೆ. ಈ ಪ್ರದೇಶಗಳಲ್ಲಿ ಗಣಿಗಾರಿಕೆ, ಮರಳು ಗಣಿಗಾರಿಕೆ, ಉಷ್ಣ ವಿದ್ಯುತ್ ಸ್ಥಾವರಗಳು, ಕಟ್ಟಡ ನಿರ್ಮಾಣ ಹಾಗೂ ಉಪನಗರ ನಿರ್ಮಾಣದಂತಹ ಕೆಲವು ಅಭಿವೃದ್ಧಿ ಚಟುವಟಿಕೆಗಳಿಗೆ ನಿರ್ಬಂಧಗಳಿವೆ ಎಂದು ಅವರು ವಿವರಿಸಿದರು.

ಈ ವಿಚಾರವನ್ನು ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲೂ ಚರ್ಚಿಸಲಾಗಿದೆ. ಕಸ್ತೂರಿ ರಂಗನ್ ಸಮಿತಿಯ ವರದಿ ಶಿಫಾರಸುಗಳನ್ನು ರಾಜ್ಯ ಸರಕಾರ ಒಪ್ಪುವುದಿಲ್ಲ. ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಹೊರಡಿಸಿರುವ ಕರಡು ಅಧಿಸೂಚನೆಗಳನ್ನೂ ತಿರಸ್ಕರಿಸಬೇಕು ಎಂಬ ತನ್ನ ನಿಲುವನ್ನು ಕೇಂದ್ರ ಸರಕಾರಕ್ಕೆ ಸ್ಪಷ್ಟವಾಗಿ ತಿಳಿಸಲಾಗಿದೆ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News