ಸಾಂವಿಧಾನಿಕ ಕರ್ತವ್ಯಗಳನ್ನು ನಿರ್ವಹಿಸುವುದು ಮಹತ್ವ ಹೊಂದಿದೆ : ರಾಜ್ಯಪಾಲರಿಗೆ ರಮೇಶ್ ಬಾಬು ಸಲಹೆ
ರಮೇಶ್ ಬಾಬು
ಬೆಂಗಳೂರು : ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲೆ ಜನರ ವಿಶ್ವಾಸ ಉಳಿಯಬೇಕೆಂಬ ನಿರೀಕ್ಷೆ ಹೆಚ್ಚಿರುವ ಇಂದಿನ ದಿನಗಳಲ್ಲಿ ಸಾಂವಿಧಾನಿಕ ಕರ್ತವ್ಯಗಳನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸುವುದು ವಿಶೇಷ ಮಹತ್ವವನ್ನು ಹೊಂದಿದೆ ಎಂದು ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ತಿಳಿಸಿದ್ದಾರೆ.
ಈ ಸಂಬಂಧ ರಾಜ್ಯಪಾಲರಾದ ಡಾ.ಸುಧಾ ಯಾದವ್ ಅವರಿಗೆ ಬಹಿರಂಗ ಪತ್ರ ಬರೆದಿರುವ ಅವರು, ನಿಮ್ಮ ಅಧಿಕಾರಾವಧಿಯಲ್ಲಿ ಸಾಂವಿಧಾನಿಕ ನೈತಿಕತೆ, ಒಕ್ಕೂಟ ವ್ಯವಸ್ಥೆ, ಜಾತ್ಯತೀತತೆ, ಸಾಮಾಜಿಕ ನ್ಯಾಯ ಮತ್ತು ಪ್ರಜಾಸತ್ತಾತ್ಮಕ ಹೊಣೆಗಾರಿಕೆಯ ತತ್ವಗಳು ಎತ್ತಿಹಿಡಿಯಲ್ಪಡಲಿವೆ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳು, ಅಂಚಿನಲ್ಲಿರುವ ಸಮುದಾಯಗಳ ಪ್ರತಿನಿಧಿಗಳು, ಸಮಾಜ ಸುಧಾರಕರು, ಬುದ್ಧಿಜೀವಿಗಳು, ರೈತರು, ಕಾರ್ಮಿಕರು, ಮಹಿಳಾ ಸಂಘಟನೆಗಳು ಮತ್ತು ನಾಗರಿಕ ಸಮಾಜದ ಗುಂಪುಗಳು ತಮ್ಮ ಅಭಿಪ್ರಾಯಗಳನ್ನು ಲೋಕಭವನದೊಂದಿಗೆ ಹಂಚಿಕೊಳ್ಳಲು ಅವಕಾಶ ಕಲ್ಪಿಸುವುದು ಸಂವಾದ ಮತ್ತು ಪರಸ್ಪರ ತಿಳಿವಳಿಕೆಯ ವಾತಾವರಣ ಬೆಳೆಸಲು ಸಾಧ್ಯವಾಗುತ್ತದೆ ಎಂದು ರಮೇಶ್ ಬಾಬು ತಿಳಿಸಿದ್ದಾರೆ.
ಎಲ್ಲ ಸಮುದಾಯಗಳ ಭಾಷೆ ಮತ್ತು ಸಂಪ್ರದಾಯಗಳಿಗೆ ಗೌರವ ನೀಡುತ್ತಲೇ ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಉತ್ತೇಜಿಸುವುದು ನಮ್ಮ ಸಾಮೂಹಿಕ ಅಸ್ಮಿತೆ ಹಾಗೂ ಸಾಮಾಜಿಕ ಸಾಮರಸ್ಯವನ್ನು ಮತ್ತಷ್ಟು ಬಲಪಡಿಸಲಿದೆ. ಸಾಂವಿಧಾನಿಕ ಸಾಕ್ಷರತೆ, ಶಿಕ್ಷಣ, ವೈಜ್ಞಾನಿಕ ಮನೋಭಾವ, ಮಹಿಳಾ ಸಬಲೀಕರಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಲೋಕಭವನವು ನಿರಂತರ ಪ್ರೋತ್ಸಾಹ ನೀಡಲಿದೆ ಎಂಬ ಆಶಯವೂ ನನ್ನದಾಗಿದೆ ಎಂದು ಅವರು ಹೇಳಿದ್ದಾರೆ.
ಸಾಂವಿಧಾನಿಕ ಸಂಸ್ಥೆಗಳ ನಡುವೆ ಪರಸ್ಪರ ಗೌರವದ ವಾತಾವರಣ ನಿರ್ಮಿಸುವಲ್ಲಿ, ವಿವಿಧ ಸಮುದಾಯಗಳ ನಡುವೆ ಸಾಮರಸ್ಯ ಬೆಳೆಸುವಲ್ಲಿ ಹಾಗೂ ಲೋಕಭವನವನ್ನು ಸಾಮಾನ್ಯ ನಾಗರಿಕರಿಗೆ ಇನ್ನಷ್ಟು ಹತ್ತಿರವಾಗಿಸುವ ಉಪಕ್ರಮಗಳನ್ನು ಉತ್ತೇಜಿಸುವಲ್ಲಿ ನಿಮ್ಮ ಪಾತ್ರ ಮಹತ್ವದ್ದಾಗಿರಲಿ ಎಂದು ರಮೇಶ್ ಬಾಬು ಆಶಿಸಿದ್ದಾರೆ.