×
Ad

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆದೇಶಿಸುವಂತೆ ಕೋರಿದ್ದ ಅರ್ಜಿ ; ರಾಜ್ಯ ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್‌

Update: 2024-02-21 12:08 IST

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಲು ಆದೇಶಿಸುವಂತೆ ಕೋರಿದ ಅರ್ಜಿ ಸಂಬಂಧ ರಾಜ್ಯ ಸರಕಾರ ಮತ್ತು ಸಿಬಿಐಗೆ ಹೈಕೋರ್ಟ್ ನೋಟಿಸ್‌ ಜಾರಿ ಮಾಡಿದೆ.

ಈ ಕುರಿತಂತೆ ಮೃತಳ ಸೌಜನ್ಯಳ ತಂದೆ ಚಂದಪ್ಪ ಗೌಡ ಸಲ್ಲಿಸಿದ್ದ ತಕರಾರು ಅರ್ಜಿ, ನ್ಯಾಯಮೂರ್ತಿ ಕೆ.ನಟರಾಜನ್ ಅವರ ನ್ಯಾಯಪೀಠದ ಮುಂದೆ ಇತ್ತೀಚೆಗೆ ವಿಚಾರಣೆಗೆ ಬಂದಿತ್ತು.

ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನಂತರ ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಎಡಿಜಿಪಿ, ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್‌ ಮಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್‌ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್‌ ಜಾರಿಗೊಳಿಸಿತು.

ಅಲ್ಲದೆ, ಪ್ರಕರಣದಿಂದ ಸಂತೋಷ್ ರಾವ್ ಅನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಮೇಲ್ಮನವಿಯೊಂದಿಗೆ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಅರ್ಜಿದಾರರು ಪರ ವಕೀಲರು ಮನವಿ ಮಾಡಿದರು.

ಅದನ್ನು ಪರಿಗಣಿಸಿರುವ ನ್ಯಾಯಪೀಠ, ರೋಸ್ಟರ್‌ ಪ್ರಕಾರ ಸೂಕ್ತ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟಿಗೆ ನ್ಯಾಯಪೀಠ ಸೂಚಿಸಿದೆ.

ಪ್ರಕರಣದಿಂದ ಖುಲಾಸೆಯಾಗಿರುವ ಸಂತೋಷ್ ರಾವ್ ಅನ್ನು ಸಹ ಪ್ರಕರಣದಲ್ಲಿ ಪ್ರತಿವಾದಿ ಮಾಡಲಾಗಿದೆ.

2012ರ ಅ.9ರಂದು ಸೌಜನ್ಯಳನ್ನು ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಹತ್ಯೆ ಮಾಡಲಾಗಿತ್ತು. ಬೆಳ್ತಂಗಡಿ ಠಾಣಾ ಪೊಲೀಸರು ಸಂತೋಷ್ ರಾವ್ ಅನ್ನು ಬಂಧಿಸಿದ್ದರು. ನಂತರ ಪ್ರಕರಣದ ತನಿಖೆಯನ್ನು ಸಿಐಡಿ, ಆ ಬಳಿಕ ಸಿಬಿಐಗೆ ವರ್ಗಾಯಿಸಲಾಗಿತ್ತು. ಸಿಬಿಐ ತನಿಖೆ ಪೂರ್ಣಗೊಳಿಸಿ ಸಂತೋಷ್ ರಾವ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಸೆಷನ್ಸ್‌ ನ್ಯಾಯಾಲಯವು ಸೂಕ್ತ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿ ಸಂತೋಷ್ ರಾವ್‌ರನ್ನು ಖುಲಾಸೆಗೊಳಿಸಿ 2023ರ ಜೂ.16ರಂದು ಆದೇಶಿಸಿತ್ತು. ಆ ಆದೇಶದಲ್ಲಿ ಪ್ರಾಸಿಕ್ಯೂಷನ್ (ತನಿಖಾಧಿಕಾರಿಗಳು) ಈ ಅಪರಾಧ ಕೃತ್ಯದಲ್ಲಿ ಆರೋಪಿಯ ಪಾತ್ರ ಇರುವುದನ್ನು ಮತ್ತು ಆತನ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ವಿಫಲವಾಗಿದೆ. ಗೋಲ್ಡನ್‌ ಹವರ್‌ನಲ್ಲಿ ತನಿಖೆಯನ್ನು ಸಮರ್ಪಕವಾಗಿ ಮಾಡಿಲ್ಲವೆಂದು ಸ್ಪಷ್ಟವಾಗಿ ಹೇಳಿದೆ. ಇದರಿಂದ ಇಡೀ ತನಿಖೆ ನ್ಯಾಯೋಚಿತವಾಗಿ ನಡೆಸಿಲ್ಲ ಎಂಬುದು ಸ್ಪಷ್ಟವಾಗಲಿರುವ ಕಾರಣ ಮರು ತನಿಖೆ ನಡೆಸಲು ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News