ಪೋಕ್ಸೋ ಪ್ರಕರಣ; ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದ ನ್ಯಾಯಾಲಯ
ಸಾಂದರ್ಭಿಕ ಚಿತ್ರ (AI)
ಬೆಂಗಳೂರು : ಸಾಮಾಜಿಕ ಜಾಲತಾಣದ ಮೂಲಕ 14 ವರ್ಷದ ಬಾಲಕಿಯನ್ನು ಪರಿಚಯ ಮಾಡಿಕೊಂಡು, ನಂಬಿಸಿ, ಬಲವಂತವಾಗಿ ಲೈಂಗಿಕ ದೌರ್ಜನ್ಯವೆಸಗಿದ ಪೋಕ್ಸೋ ಪ್ರಕರಣದ ಆರೋಪಿಗೆ ನ್ಯಾಯಾಲಯವು 20 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 40 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.
ತಮ್ಮ ಮನೆಯ ಹತ್ತಿರ ಹಾರ್ಡವೇರ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೋರ್ವನು, ತಮ್ಮ 14 ವರ್ಷದ ಮಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಮಾಡಿಕೊಂಡು ಪ್ರೀತಿ ಮಾಡುತ್ತಿರುವುದಾಗಿ ಹೇಳಿ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ಮೈಲಸಂದ್ರದ ನಿವಾಸಿಯೊಬ್ಬರು ಎಲೆಕ್ಟ್ರಾನಿಕ್ಸಿಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಆರೋಪಿಯು ತಮ್ಮ ಮಗಳನ್ನು ಪ್ರೀತಿ ಮಾಡುತ್ತಿರುವುದಾಗಿ ಹಾಗೂ ಮದುವೆ ಮಾಡಿಕೊಂಡು ಚೆನ್ನಾಗಿ ನೋಡಿಕೊಳ್ಳುವುದಾಗಿ ಹೇಳಿ, 2024ರ ಆ.25ರ ಮದ್ಯಾಹ್ನ ಆಕೆಗೆ ಕರೆ ಮಾಡಿ ಬೆಟ್ಟದಾಸನಪುರ ಗ್ರಾಮದ ಬಳಿ ಬರುವಂತೆ ತಿಳಿಸಿದ್ದಾನೆ. ನಂತರ ಆರೋಪಿಯು ಅತ್ತಿಬೆಲೆಯಲ್ಲಿರುವ ತನ್ನ ಬಾಡಿಗೆ ಮನೆಗೆ ಬಾಲಕಿಯನ್ನು ಕರೆದುಕೊಂಡು ಹೋಗಿ, ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖವಾಗಿದ್ದು, ಈ ಕುರಿತು ಎಲೆಕ್ಟ್ರಾನಿಕ್ಸಿಟಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿರುತ್ತದೆ.
ತನಿಖೆಯನ್ನು ನಡೆಸಿದ ಪೊಲೀಸರು ಆರೋಪಿಯನ್ನು ಪತ್ತೆಮಾಡಿ ತನಿಖೆಯನ್ನು ಪೂರ್ಣಗೊಳಿಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದಾರೆ. ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಬಿ.ಎನ್.ಎಸ್ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಯಡಿ ಆರೋಪ ಸಾಬೀತಾಗಿದ್ದು, ಎಫ್.ಟಿ.ಎಸ್.ಸಿ-2 ಬೆಂಗಳೂರು ಗ್ರಾಮಾಂತರ ನ್ಯಾಯಾಲಯದ ನ್ಯಾಯಾಧೀಶೆ ಅನುಪಮಾ ಲಕ್ಷ್ಮೀ.ಬಿ. ಆರೋಪಿಗೆ 20 ವರ್ಷ ಕಾರಾಗೃಹವಾಸ ಮತ್ತು 40 ಸಾವಿರ ದಂಡವನ್ನು ವಿಧಿಸಿ ತೀರ್ಪು ನೀಡಿದ್ದಾರೆ. ಹಾಗೆಯೇ ಸಂತ್ರಸ್ಥ ಬಾಲಕಿಗೆ 5 ಲಕ್ಷ ರೂ. ಹಣ ಪರಿಹಾರವನ್ನು ಘೋಷಿಸಿದ್ದಾರೆ.