×
Ad

ರಾಜ್ಯಾದ್ಯಂತ ಮಳೆ | ಕುಡಿಯುವ ನೀರು ಕಲುಷಿತಗೊಳ್ಳದಂತೆ ಕ್ರಮ ಕೈಗೊಳ್ಳಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

Update: 2025-05-21 20:40 IST

ಬೆಂಗಳೂರು : ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿರುವುದರಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕುಡಿಯುವ ನೀರು ಸರಬರಾಜಾಗುವ ಕೊಳವೆಗಳಿಗೆ ಕಲುಷಿತ ನೀರು ಸೇರಿಕೊಳ್ಳುವ ಸಾಧ್ಯತೆಗಳಿವೆ. ಆದುದರಿಂದ, ಗ್ರಾಮೀಣ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ಕುಡಿಯುವ ನೀರು ಕಲುಷಿತಗೊಳ್ಳದಂತೆ ಅಗತ್ಯ ಮುಂಜಾಗರೂಕತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ರಾಮೀಣ ಭಾಗದ ಜನರು ಎಚ್ಚರಿಕೆಯಿಂದ ಇರಬೇಕು. ಅದರಲ್ಲಿಯೂ ಕುಡಿಯುವ ನೀರು ಕಲುಷಿತಗೊಳ್ಳುವ ಸಾಧ್ಯತೆಗಳಿದ್ದು ನೀರನ್ನು ಕಾಯಿಸಿಕೊಂಡು ಸೇವಿಸಬೇಕೆಂದು ಮನವಿ ಮಾಡಿದ್ದಾರೆ. ಈ ಕುರಿತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ಸೂಚಿಸಿದ್ದಾರೆ.

ಕಡು ಬೇಸಿಗೆಯ ನಂತರ ಒಮ್ಮೆಲೆ ಮಳೆ ಸುರಿಯುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳು ಹರಡಬಹುದು. ಈ ಬಗ್ಗೆಯೂ ಗ್ರಾಮೀಣ ವಾಸಿಗಳು ಜಾಗ್ರತೆಯಿಂದ ಇರಬೇಕು, ಶಾಲೆಗಳು ಪುನರಾರಂಭವಾಗುವ ದಿನಗಳು ಸಮೀಪಿಸಿರುವುದರಿಂದ ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ನಿಗಾ ಇರಿಸಿಕೊಳ್ಳಬೇಕೆಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಸಂಬಂಧ ಪಂಚಾಯತ್ ರಾಜ್ ಆಯುಕ್ತರಿಗೆ ಸೂಚನೆ ನೀಡಿದ್ದು, ಪ್ರತಿ ಗ್ರಾಮದಲ್ಲಿಯೂ ನಿಯಮಿತವಾಗಿ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಿಸಲು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಸೂಚಿಸುವಂತೆ ಅವರು ನಿರ್ದೇಶಿಸಿದ್ದಾರೆ.

ನೀರಿನ ಮೂಲಗಳಲ್ಲಿ ಹಾಗೂ ನೀರು ಸರಬರಾಜಾಗುವ ಕೊಳವೆ ಮಾರ್ಗಗಳನ್ನು ಸುಸ್ಥಿತಿಯಲ್ಲಿರಿಸಿಕೊಳ್ಳಲು ಹಾಗೂ ಕಲುಷಿತಗೊಳ್ಳದಂತೆ ತಡೆಯಲು ಅಧಿಕಾರಿಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು. ನೀರು ಮಾದರಿ ಪರೀಕ್ಷೆ ಮಾಡುವ ಪ್ರಯೋಗಾಲಯಗಳನ್ನು ಸಮರ್ಪಕವಾಗಿ ನಿರ್ವಹಿಸುವತ್ತ ಗಮನ ಹರಿಸಬೇಕೆಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ನೀರು ಮಾದರಿ ಪರೀಕ್ಷೆಯಲ್ಲಿ ಅನುಮಾನ ಬಂದಲ್ಲಿ ತಕ್ಷಣ ಅಂತಹ ಪ್ರದೇಶಗಳಿಗೆ ಕೊಳವೆ ನೀರು ಪೂರೈಕೆ ನಿಲ್ಲಿಸಿ, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. ನೀರಿನ ಮೂಲಗಳನ್ನು ಸಂರಕ್ಷಿಸುವುದು ಅತ್ಯಂತ ಮುಖ್ಯವಾಗಿದ್ದು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕೆಂದು ಅವರು ಸೂಚಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News