ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಿರುದ್ಧ ದೂರು ನೀಡಲು ಕೆಲ ಸಚಿವರು ಸಿದ್ಧತೆ?
ರಣದೀಪ್ ಸಿಂಗ್ ಸುರ್ಜೇವಾಲಾ
ಬೆಂಗಳೂರು: ರಾಜ್ಯ ಕಾಂಗ್ರೆಸ್‍ನಲ್ಲಿ ಬಣ ರಾಜಕೀಯದ ಮುಸುಕಿನ ಗುದ್ದಾಟದ ನಡುವೆಯೇ ಕೆಲವು ಸಚಿವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ವಿರುದ್ಧವೇ ಹೈಕಮಾಂಡ್‍ಗೆ ದೂರು ನೀಡಲು ಕೆಲ ಸಚಿವರು ಮುಂದಾಗಿದ್ದಾರೆ ಎನ್ನಲಾಗಿದೆ.
ಸುರ್ಜೇವಾಲಾರನ್ನು ರಾಜ್ಯ ಉಸ್ತುವಾರಿಯಿಂದ ವಾಪಸ್ ಕರೆಸಿಕೊಳ್ಳುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೆಲವು ಸಚಿವರು ಹಾಗೂ ಶಾಸಕರು ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.
ಹಾಸನದಲ್ಲಿ ಆಯೋಜಿಸಲಾಗಿದ್ದ ಸ್ವಾಭಿಮಾನ ಸಮಾವೇಶದ ಹೆಸರು ಬದಲಾವಣೆ, ದಲಿತ ಸಮುದಾಯದ ಸಚಿವರು ಆಯೋಜಿಸಿದ್ದ ಔತಣಕೂಟಕ್ಕೆ ತಡೆ ಹಾಕಿದರು. ಆದರೆ, ಬೆಳಗಾವಿಯಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಪ್ರತ್ಯೇಕವಾಗಿ ಸಭೆಗಳನ್ನು ನಡೆಸಿದರೂ ಯಾವುದೆ ತಡೆಯೊಡ್ಡಿಲ್ಲ. ನಮ್ಮ ಸಭೆಗಳಿಗೆ ಮಾತ್ರ ಯಾಕೆ ತಡೆ ಎಂದು ಸುರ್ಜೇವಾಲಾ ವರ್ತನೆಗೆ ಕೆಲ ಸಚಿವರು ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಸುರ್ಜೇವಾಲಾ ಎಲ್ಲರ ಸಮಸ್ಯೆಗಳನ್ನು ಆಲಿಸಿ, ಪರಿಸ್ಥಿತಿಯನ್ನು ತಿಳಿಗೊಳಿಸಬೇಕಿತ್ತು. ಆದರೆ, ಅವರು ಪಕ್ಷಪಾತಿ ಧೋರಣೆ ಅನುಸರಿಸಿದ್ದರಿಂದ ಈ ವಿಷಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ಬಳಿ ಹೋಯಿತು ಎಂದು ಸಚಿವರು, ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಸುರ್ಜೇವಾಲಾ ವಿರುದ್ಧ ದೂರು ಕೊಟ್ಟಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ವಿರುದ್ಧ ಕೆಲವು ಸಚಿವರು ಅಸಮಾಧಾನ ವ್ಯಕ್ತಪಡಿಸಿ, ಹೈಕಮಾಂಡ್‍ಗೆ ದೂರು ನೀಡಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಸೋಮವಾರ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದ ಉದ್ಯಾನಕಾಶಿಯಲ್ಲಿ ಸಣ್ಣ ನೀರಾವರಿ ಸಚಿವ ಭೋಸರಾಜು ಅವರೊಂದಿಗೆ 15 ಕೋಟಿ ರೂ.ವೆಚ್ಚದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಕಾರ್ಯಾಲಯ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಾದರೂ ದೂರು ಕೊಟ್ಟಿದ್ದರೆ ಅವರ ಬಳಿಯೇ ಈ ವಿಚಾರವನ್ನು ಕೇಳಿ. ನನ್ನ ಹಾಗೂ ಸುರ್ಜೇವಾಲಾ ನಡುವಿನ ಸಂಬಂಧ ಉತ್ತಮವಾಗಿದೆ ಎಂದು ಹೇಳಿದರು.
ಮಾಧ್ಯಮಗಳ ಘನತೆ ಹಾಳು ಮಾಡುತ್ತಿದ್ದಾರೆ: ‘ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನೇ ಬದಲಾವಣೆ ಮಾಡಬೇಕು ಎಂದು ಕೆಲವು ಸಚಿವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ದೂರು ನೀಡುತ್ತಿದ್ದಾರಂತೆ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಯಾರೋ ಸುಳ್ಳು ಮಾಹಿತಿ ನೀಡಿ ಮಾಧ್ಯಮಗಳ ಘನತೆಯನ್ನೇ ಹಾಳು ಮಾಡುತ್ತಿದ್ದಾರೆ ಎಂದು ಹೇಳಿದರು.