×
Ad

ಸ್ವಪಕ್ಷದ ಶಾಸಕರಿಂದಲೇ ಭ್ರಷ್ಟಾಚಾರ ಆರೋಪ, ಸಚಿವ ಝಮೀ‌ರ್ ಅಹ್ಮದ್‌ ರಾಜೀನಾಮೆ ನೀಡಲಿ : ಆ‌ರ್.ಅಶೋಕ್

Update: 2025-06-20 14:43 IST

ಆರ್‌.ಅಶೋಕ್‌ 

ಬೆಂಗಳೂರು : ಶಾಸಕ ಬಿ.ಆರ್.ಪಾಟೀಲ್ ಅವರು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಲಂಚಗುಳಿತನದ ಬಗ್ಗೆ ತಮಗಿರುವ ಮಾಹಿತಿಯನ್ನು ಬಹಿರಂಗ ಪಡಿಸಬೇಕು ಮತ್ತು ಲೋಕಾಯುಕ್ತಕ್ಕೆ ದೂರು ಸಲ್ಲಿಸಬೇಕು ಎಂದು ಆಗ್ರಹಿಸುತ್ತೇನೆ. ಅವರಿಗೆ ಈ ವಿಷಯದಲ್ಲಿ ರಾಜ್ಯ ಬಿಜೆಪಿಯು ಸಂಪೂರ್ಣ ಬೆಂಬಲ ನೀಡಲಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, ಕಾಂಗ್ರೆಸ್ ಸರಕಾರದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಅವರು ನೀಡಿದ್ದ ಹೇಳಿಕೆಗೆ ಪುಷ್ಟಿ ನೀಡುವಂತೆ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರು ವಸತಿ ಸಚಿವ ಝಮೀರ್‌ ಅಹ್ಮದ್‌ ಅವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಆರೋಪ ಮಾಡಿರುವ ಶಾಸಕ ಬಿ.ಆರ್.ಪಾಟೀಲ್ ಅವರು ತಮ್ಮಲ್ಲಿರುವ ಭ್ರಷ್ಟಾಚಾರದ ಮಾಹಿತಿಯನ್ನು ಬಹಿರಂಗ ಪಡಿಸಿದರೆ ಸರಕಾರವೇ ಅಲ್ಲಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಸ್ವಪಕ್ಷದ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡುತ್ತಿರುವಾಗ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ತಮ್ಮ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿದೆ? ಎಂದು ಅವರು ಪ್ರಶ್ನಿಸಿದ್ದಾರೆ.

ಸಿಎಂ  ಸಿದ್ದರಾಮಯ್ಯನವರೇ, ಈ ಕೂಡಲೇ ಸಚಿವ ಝಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆ ಪಡೆದು ಶಾಸಕ ಬಿ.ಆರ್.ಪಾಟೀಲ್ ಅವರ ಮೊಬೈಲ್ ಕರೆ ಆಡಿಯೋ ಆಧಾರದ ಮೇಲೆ ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಿ ಎಂದು ಅವರು ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News