×
Ad

3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ; ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ : ಪ್ರಿಯಾಂಕ್ ಖರ್ಗೆ

Update: 2026-07-04 12:30 IST

ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಗೃಹ ಇಲಾಖೆಯಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದ್ದು, 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನೇಮಕಾತಿಗೆ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಸ್ತುತ ನಡೆಯುತ್ತಿದೆ. ಈ ಹಿಂದೆ ಜುಲೈ 3 ಅನ್ನು ಅರ್ಜಿ ಸಲ್ಲಿಕೆಗೆ ಹಾಗೂ ಜುಲೈ 4 ಅನ್ನು ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನಾಂಕವಾಗಿ ನಿಗದಿಪಡಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಆದರೆ, ತಾಂತ್ರಿಕ ಸಮಸ್ಯೆಗಳು, ಅಗತ್ಯ ಪ್ರಮಾಣಪತ್ರಗಳನ್ನು ಪಡೆಯುವಲ್ಲಿ ವಿಳಂಬ ಹಾಗೂ ಇತರೆ ಕಾರಣಗಳಿಂದ ನಿಗದಿತ ಅವಧಿಯಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಈಗಾಗಲೇ ಸಲ್ಲಿಸಿರುವ ಅರ್ಜಿಗಳಲ್ಲಿನ ಮಾಹಿತಿಯನ್ನು ತಿದ್ದುಪಡಿ ಮಾಡಲು ಅವಕಾಶ ನೀಡುವಂತೆ ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದರು.

ಈ ಮನವಿಗಳನ್ನು ಪರಿಗಣಿಸಿದ ಸರ್ಕಾರ, ಎಲ್ಲ ಅರ್ಹ ಅಭ್ಯರ್ಥಿಗಳಿಗೆ ಸಮಾನ ಅವಕಾಶ ಕಲ್ಪಿಸುವ ಉದ್ದೇಶದಿಂದ ಅರ್ಜಿ ಸಲ್ಲಿಕೆ ಹಾಗೂ ತಿದ್ದುಪಡಿ ವೇಳಾಪಟ್ಟಿಯನ್ನು ವಿಸ್ತರಿಸಿದೆ.

ಪರಿಷ್ಕೃತ ವೇಳಾಪಟ್ಟಿಯಂತೆ, ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಅರ್ಜಿ ಶುಲ್ಕ ಪಾವತಿಗೆ ಜುಲೈ 8, 2026 ಸಂಜೆ 4 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಈಗಾಗಲೇ ಸಲ್ಲಿಸಿರುವ ಅರ್ಜಿಗಳಲ್ಲಿನ ವಿವರಗಳನ್ನು ಜುಲೈ 12, 2026ರವರೆಗೆ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News