ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರ ಖಾತೆಗೆ ಜಮೆಯಾಗುವ 2,000 ರೂಪಾಯಿ ಮೊತ್ತವನ್ನು ಸಾಲದ ಕಂತಿನಿಂದ ಮುಕ್ತಿ ನೀಡಿ ಸರಕಾರವು ಮಹತ್ವದ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿಗಳ ಕಟ್ಟುನಿಟ್ಟಿನ ಸೂಚನೆ ಹಾಗೂ ಆದೇಶದ ಮೇರೆಗೆ ಯಾವುದೇ ಕಾರಣಕ್ಕೂ ಹಳೆಯ ಸಾಲದ ಕಂತು, ಬಡ್ಡಿ ಅಥವಾ ಇತರೆ ಬಾಕಿಗಳಿಗೆ ಗೃಹಲಕ್ಷ್ಮೀ ಯೋಜನೆಯ 2,000 ರೂಪಾಯಿ ಜಮೆ ಮಾಡಿಕೊಳ್ಳಬಾರದು ಎಂದು ಆದೇಶ ಹೊರಡಿಸಿದೆ. ಈ ಸಂಬಂಧ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಅವರು ರಾಜ್ಯ ಮಟ್ಟದ ಬ್ಯಾಂಕರ್ಸ್ ಸಮಿತಿಗೆ (ಎಸ್‍ಎಲ್‍ಬಿಸಿ) ನಿರ್ದೇಶನ ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಸಲ್ಲಿಸಿದ್ದ ಮನವಿ ಪತ್ರಕ್ಕೆ ಮುಖ್ಯಮಂತ್ರಿಗಳು ತಕ್ಷಣವೇ ಸಕಾರಾತ್ಮಕವಾಗಿ ಸ್ಪಂದಿಸಿದಲ್ಲದೆ, ಬ್ಯಾಂಕ್ ಆಡಳಿತ ಮಂಡಳಿಗೆ ಪತ್ರ ಬರೆಯಿರಿ, ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಯಿಂದ ಹಣವನ್ನು ಸಾಲದ ಕಂತಿಗೆ ಕಡಿತಗೊಳಿಸದಂತೆ ಸ್ಪಷ್ಟವಾಗಿ ತಿಳಿಸಿ ಎಂದು ಮುಖ್ಯ ಕಾರ್ಯದರ್ಶಿಯವರಿಗೆ ನಿರ್ದೇಶನ ನೀಡಿದ್ದರು.

ಮುಖ್ಯಮಂತ್ರಿಗಳ ಈ ಆದೇಶದ ಬೆನ್ನಲ್ಲೇ ಇದೀಗ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್, ರಾಜ್ಯ ಮಟ್ಟದ ಬ್ಯಾಂಕರ್ಸ್ ಸಮಿತಿಯ ಸಂಚಾಲಕರಿಗೆ ಅಧಿಕೃತ ಪತ್ರ ಬರೆದು, ರಾಜ್ಯದಲ್ಲಿರುವ ಎಲ್ಲ ವಾಣಿಜ್ಯ ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಹಾಗೂ ಇತರೆ ಹಣಕಾಸು ಸಂಸ್ಥೆಗಳು ಕಡ್ಡಾಯವಾಗಿ ಪಾಲಿಸಬೇಕಾದ ಕಟ್ಟುನಿಟ್ಟಿನ ಮಾರ್ಗ ಸೂಚಿಗಳನ್ನು ಜಾರಿಗೊಳಿಸಿದ್ದಾರೆ.

ಪ್ರಮುಖ ನಿರ್ದೇಶನಗಳೇನು? :

► ಸಾಲಕ್ಕೆ ಹೊಂದಾಣಿಕೆ ನಿμÉೀಧ: ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಜಮೆಯಾಗುವ ಮೊತ್ತವನ್ನು ಯಾವುದೇ ಕಾರಣಕ್ಕೂ ಸಾಲದ ಕಂತು, ಬಡ್ಡಿ ಅಥವಾ ಇತರೆ ಸಾಲದ ಬಾಕಿಗೆ ಹೊಂದಾಣಿಕೆ ಮಾಡಿಕೊಳ್ಳುವಂತಿಲ್ಲ.

► ಶಾಖಾ ಸಿಬ್ಬಂದಿಗೆ ಕಡ್ಡಾಯ ಸೂಚನೆ :

ಗೃಹಲಕ್ಷ್ಮೀ ಹಣವು ಮಹಿಳೆಯರಿಗೆ ಸಂಪೂರ್ಣವಾಗಿ ತಲುಪುವಂತೆ ಎಲ್ಲಾ ಬ್ಯಾಂಕ್ ಶಾಖೆಗಳಿಗೆ ಹಾಗೂ ಸಂಬಂಧಪಟ್ಟ ಸಿಬ್ಬಂದಿಗೆ ಸ್ಪಷ್ಟ ಸೂಚನೆಗಳನ್ನು ರವಾನಿಸಬೇಕು.

► ಆಟೋ ಡೆಬಿಟ್‍ಗೆ ನಿರ್ಬಂಧ :

ಫಲಾನುಭವಿಯ ಖಾತೆಯಿಂದ ಸದರಿ ಮೊತ್ತವನ್ನು ಯಾವುದೇ ಕಾರಣಕ್ಕೂ ಸ್ವಯಂಚಾಲಿತವಾಗಿ ಡೆಬಿಟ್ ಅಥವಾ ಹೊಂದಾಣಿಕೆ ಮಾಡದಂತೆ ಬ್ಯಾಂಕುಗಳು ಅಗತ್ಯ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಬೇಕು.

► ಕಡಿತವಾದ ಹಣ ತಕ್ಷಣ ಮರುಪಾವತಿ :

ಫಲಾನುಭವಿಗಳ ಸ್ಪಷ್ಟ ಲಿಖಿತ ಒಪ್ಪಿಗೆಯಿಲ್ಲದೆ ಸಾಲದ ಬಾಕಿಗೆ ಈಗಾಗಲೇ ಕಡಿತಗೊಳಿಸಲಾಗಿರುವ ಹಣವನ್ನು ತಕ್ಷಣವೇ ಆಯಾ ಮಹಿಳೆಯರ ಖಾತೆಗೆ ಮರುಜಮೆ ಮಾಡಬೇಕು. ಈ ಕುರಿತು ಬ್ಯಾಂಕುಗಳಿಗೆ ಹಾಗೂ ಎಲ್ಲ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ (ಸಿಇಒ) ಈಗಾಗಲೇ ನಿರ್ದೇಶನ ನೀಡಲಾಗಿದೆ.

ಈ ಮೇಲ್ಕಂಡ ನಿರ್ದೇಶನಗಳನ್ನು ರಾಜ್ಯದ ಎಲ್ಲ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಸುತ್ತೋಲೆ ಹೊರಡಿಸಿ, ಕೈಗೊಂಡ ಕ್ರಮದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಎಸ್‍ಎಲ್‍ಬಿಸಿ ಸಂಚಾಲಕರಿಗೆ ಸೂಚಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor