ರೇಣುಕಸ್ವಾಮಿ ಹತ್ಯೆ ಪ್ರಕರಣ | ಜಾಮೀನು ರದ್ದಾದ ಹಿನ್ನೆಲೆ: ಪವಿತ್ರಾ ಗೌಡಳ ಬಂಧನ
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಂಡ ಹಿನ್ನೆಲೆಯಲ್ಲಿ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡಳನ್ನು ಪೊಲೀಸರು ಬಂಧಿಸಿದ್ದಾರೆ.
ಪವಿತ್ರಾ ಗೌಡಳನ್ನು ಆಕೆಯ ಆರ್. ಆರ್. ನಗರದ ನಿವಾಸದಿಂದ ಪೊಲೀಸರು ಬಂಧಿಸಿದ್ದಾರೆ.
ಇದೇ ಪ್ರಕರಣದಲ್ಲಿ ಎ11 ಆರೋಪಿ ನಾಗರಾಜ್ ಅಲಿಯಾಸ್ ನಾಗಾ, ಎ12 ಲಕ್ಷ್ಮಣ್ ಹಾಗೂ ಎ14 ಆರೋಪಿ ಪ್ರದೋಶ್ ಎಂಬವರನ್ನೂ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಬಳಿಕ ಸೆಷನ್ಸ್ ಕೋರ್ಟ್ ಗೆ ಹಾಜರುಪಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಇನ್ನು ನಟ ದರ್ಶನ್ ನನ್ನು ಕೂಡಾ ಇಂದೇ ಬಂಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸಹಿತ ಎಲ್ಲಾ ಏಳು ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಈ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ನಿಯಮಿತ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರಕಾರ ಮೇಲ್ಮನವಿ ಸಲ್ಲಿಸಿತ್ತು.
ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಜೆ.ಬಿ.ಪಾರ್ದಿವಾಲಾ ಹಾಗೂ ಆರ್ ಮಹಾದೇವನ್ ಅವರಿರುವ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ.
2024ರ ಜೂನ್ 8ರಂದು ಚಿತ್ರದುರ್ಗದ ರೇಣುಕಸ್ವಾಮಿಯವರನ್ನು ಅಪಹರಿಸಿ ಕೊಲೆ ಮಾಡಿದ ಆರೋಪದಡಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು.
ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್ ಹಾಗೂ ಜಗದೀಶ್ ಅವರಿಗೆ ಹೈಕೋರ್ಟ್ ನಿಯಮಿತ ಜಾಮೀನು ಮಂಜೂರು ಮಾಡಿತ್ತು. ಉಳಿದ ಹತ್ತು ಮಂದಿ ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.