ರೇಣುಕಾಸ್ವಾಮಿ ಕೊಲೆ ಪ್ರಕರಣ | ತನಿಖಾ ತಂಡದ ವಿರುದ್ಧ ಸ್ನೇಹಮಯಿ ಕೃಷ್ಣ ದೂರು
ರೇಣುಕಾಸ್ವಾಮಿ, ಸ್ನೇಹಮಯಿ ಕೃಷ್ಣ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸಿದ ಪೊಲೀಸ್ ತಂಡದ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ರಾಜ್ಯ ಡಿಜಿ ಐಜಿಪಿ ಎಂ.ಎ. ಸಲೀಂ ಅವರಿಗೆ ದೂರು ನೀಡಿದ್ದಾರೆ.
ಐದು ಪುಟಗಳ ಸುದೀರ್ಘ ದೂರಿನಲ್ಲಿ ಪ್ರಕರಣದ ತನಿಖೆಯಲ್ಲಿ ಸಾಕಷ್ಟು ಲೋಪದೋಷಗಳು ನಡೆದಿವೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ಅಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಪಿಎಸ್‌ಐ ಆಗಿದ್ದ ವಿನಯ್ ಹಾಗೂ ಪ್ರಕರಣದ ತನಿಖಾಧಿಕಾರಿಯಾಗಿದ್ದ ಎಸಿಪಿ ಚಂದನ್ ಅವರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ.
ಪ್ರಕರಣದ 14ನೇ ಆರೋಪಿಯಾಗಿದ್ದ ಪ್ರದೂಷ್ ರಾವ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಮಾಡಿದ ಹಿನ್ನೆಲೆಯಲ್ಲಿ, ಪಿಎಸ್‌ಐ ವಿನಯ್ ಅವರನ್ನೂ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಬೇಕಿತ್ತು ಎಂದು ಸ್ನೇಹಮಯಿ ಕೃಷ್ಣ ಆಗ್ರಹಿಸಿದ್ದಾರೆ. ಮೃತದೇಹವನ್ನು ಎಸೆಯುವ ಕುರಿತು ಪಿಎಸ್‌ಐ ವಿನಯ್ ಅವರು ಆರೋಪಿಗಳಿಗೆ ನಿರ್ದೇಶನ ನೀಡಿದ್ದರೂ, ಅವರನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದಲ್ಲದೆ, ಪ್ರಕರಣದ ತನಿಖಾಧಿಕಾರಿ ಎಸಿಪಿ ಚಂದನ್ ಅವರು ತನಿಖೆಯ ಸಂದರ್ಭದಲ್ಲಿ ಹಲವು ಸಾಕ್ಷ್ಯಗಳನ್ನು ಸ್ವಯಂ ಸೃಷ್ಟಿಸಿದ್ದಾರೆ ಎಂಬ ಗಂಭೀರ ಆರೋಪವನ್ನೂ ಸ್ನೇಹಮಯಿ ಕೃಷ್ಣ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ ಅವರ ನೇತೃತ್ವದಲ್ಲಿ ಇಲಾಖಾ ತನಿಖೆ ನಡೆಸುವಂತೆ ಸೂಚಿಸಲಾಗಿದೆ. ಪಿಎಸ್‌ಐ ವಿನಯ್ ಹಾಗೂ ಎಸಿಪಿ ಚಂದನ್ ಅವರ ಪಾತ್ರದ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.