×
Ad

ದೂರುದಾರರಿಗೆ ಸ್ಪಂದಿಸದ ಠಾಣಾಧಿಕಾರಿಗಳ ವಿರುದ್ಧ ಕಠಿಣ ಕ್ರಮ : ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ

Update: 2026-05-15 19:17 IST

ಬೆಂಗಳೂರು : ಸಮಸ್ಯೆಗಳನ್ನು ಹೊತ್ತು ಬರುವ ದೂರುದಾರರಿಗೆ ಸರಿಯಾಗಿ ಸ್ಪಂದಿಸದ ಠಾಣಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ನಗರದ ಥಣಿಸಂದ್ರದಲ್ಲಿರುವ ಉತ್ತರನಗರ ಸಶಸ್ತ್ರ ಮೀಸಲು ಪಡೆ ಕವಾಯತು ಮೈದಾನದಲ್ಲಿ ನಡೆದ ಮಾಸಿಕ ಕವಾಯತುವಿನಲ್ಲಿ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಪೊಲೀಸ್ ಠಾಣೆಗಳು ಸರಿಯಾದ ರೀತಿಯಲ್ಲಿ ಕೆಲಸ ಮಾಡಿದರೆ ಎಲ್ಲವೂ ಸರಿ ಇರುತ್ತದೆ. ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿದರೆ ನಮ್ಮ ಇಲಾಖೆಗೆ ಒಳ್ಳೆಯ ಹೆಸರು ಬರುತ್ತದೆ ಎಂದರು.

ದೂರುದಾರರು ಮತ್ತು ಸಾರ್ವಜನಿಕರು ಪೊಲೀಸ್ ಠಾಣೆಗಳಿಗೆ ಹೋದಾಗ ಸರಿಯಾಗಿ ಸ್ಪಂದಿಸಲಿಲ್ಲ ಎಂಬ ಆರೋಪಗಳು ಕೇಳಿಬಂದಿವೆ. ಠಾಣಾಧಿಕಾರಿಗಳು ಸ್ಪಂದಿಸದಿದ್ದರೆ ಅವರು ಮೇಲಾಧಿಕಾರಿಗಳನ್ನು ಭೇಟಿ ಮಾಡುತ್ತಾರೆ. ಇದು ಆಗಬಾರದು. ಯಾರಾದರೂ ಮೇಲಾಧಿಕಾರಿಗಳನ್ನು ಭೇಟಿ ಮಾಡಿ ಠಾಣಾಧಿಕಾರಿಗಳ ಮೇಲೆ ಆರೋಪ ಮಾಡಿದರೆ ಸಂಬಂಧಪಟ್ಟ ಠಾಣಾಧಿಕಾರಿ ವಿರುದ್ಧ ಮುಲಾಜಿಲ್ಲದೇ ಕ್ರಮ ಆಗುತ್ತದೆ ಎಂದು ಸೀಮಂತ್ ಕುಮಾರ್ ಸಿಂಗ್ ಹೇಳಿದರು.

ಠಾಣಾ ಮಟ್ಟದಲ್ಲಿ ಸಭೆ ನಡೆಸಿ ಈ ಬಗ್ಗೆ ಸೂಚನೆ ನೀಡಲಾಗಿದೆ. ಈಗಾಗಲೇ ಡಿಸಿಪಿ ಮತ್ತು ಎಸಿಪಿಗಳು ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ತಿಳಿಸಿದ್ದೇನೆ ಎಂದು ಸೀಮಂತ್ ಕುಮಾರ್ ಸಿಂಗ್ ತಿಳಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News